×
Ad

‘ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ’

Update: 2016-04-26 23:36 IST

ಸಚಿವ ಜಯಚಂದ್ರಗೆ ಎಸ್.ಎಂ.ಕೃಷ್ಣ ಪತ್ರ
ಬೆಂಗಳೂರು, ಎ. 26: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಿವಿಧ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಗೆ ಬಹುದಿನಗಳಿಂದ ನನೆಗುದಿಗೆ ಬಿದ್ದಿರುವ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಬರ ಅಧ್ಯಯನಕ್ಕೆ ಸಂಪುಟ ಉಪಸಮಿತಿ ನೇತೃತ್ವ ವಹಿಸಿರುವ ಸಚಿವ ಜಯಚಂದ್ರರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪತ್ರ ಬರೆದಿದ್ದಾರೆ.
ಮದ್ದೂರು ತಾಲೂಕಿನ ವಿವಿಧ ಗ್ರಾಮಗಳ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೆ. ಆದರೆ, ಅನಂತರ ಅಧಿಕಾರಕ್ಕೆ ಬಂದ ಸರಕಾರಗಳು ಯೋಜನೆಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ನೀರಿನ ಸಮಸ್ಯೆ ಗಂಭೀರ ಸ್ವರೂಪದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಮದ್ದೂರು ತಾಲೂಕು ಆತಗೂರು-ಮಾಚಹಳ್ಳಿ ಕೆರೆ ಹಾಗೂ ಕೆ.ಹೊನ್ನಲಗೆರೆ ಸೇರಿದಂತೆ ವಿವಿಧ ಗ್ರಾಮಗಳ ಕೆರೆಗಳಿಗೆ ನೀರುಣಿಸಲು ರೂಪಿಸಿದ್ದ ಬಾಣೋಜಿಪಂತ್ ಮತ್ತು ಆತನೂರು ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಅಧಿಕಾರಸ್ಥರ ನಿರಾಸಕ್ತಿ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿವೆ ಎಂದು ಗಮನ ಸೆಳೆದಿದ್ದಾರೆ.
ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ಬಳಿಯ ಬನ್ನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹತ್ತು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಆದುದರಿಂದ ತಾವು ಈ ಯೋಜನೆಗಳನ್ನು ಪೂರ್ಣಗೊಳಿಸಲು ಖುದ್ದಾಗಿ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಕೃಷ್ಣ ಪತ್ರದಲ್ಲಿ ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News