ಬರ ನಿರ್ವಹಣೆಗೆ ಹಣಕಾಸಿನ ಕೊರತೆಯಿಲ್ಲ: ಸಚಿವ ಕಿಮ್ಮನೆ
ಸಾಗರ,ಎ.29: ಜಿಲ್ಲೆಯಲ್ಲಿ ಉದ್ಭವಿಸಿರುವ ಬರ ನಿರ್ವಹಣೆಗೆ 20 ಕೋಟಿ ರೂ. ಅಗತ್ಯವಿದ್ದು, ಅಂದಾಜನ್ನು ತಯಾರಿಸಿ ಸರಕಾರಕ್ಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಬರ ಪರಿಶೀಲನಾ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಈಗಾಗಲೇ ಬರ ಪರಿಸ್ಥಿತಿ ಕುರಿತು ಸಭೆಯನ್ನು ನಡೆಸಲಾಗಿದ್ದು, ಪ್ರತೀ ತಾಲೂಕಿಗೆ 3 ರಿಂದ 5 ಕೋಟಿ ರೂ. ಬರ ನಿರ್ವಹಣೆಗೆ ಅಗತ್ಯವಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬೋರ್‌ವೆಲ್ ನಿರ್ಮಾಣ, ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಪೈಪ್‌ಲೈನ್ ಅಳವಡಿಕೆ, ಅಗತ್ಯ ಇರುವ ಕಡೆಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಇನ್ನಿತರೆ ನಿಗಾವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಪ್ರತಿ ತಾಲೂಕಿನಿಂದಲೂ ಪ್ರತ್ಯೇಕ ವರದಿಯನ್ನು ತಯಾರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಕುಡಿಯುವ ನೀರು ಸೇರಿದಂತೆ ತುರ್ತು ಸ್ಥಿತಿ ಎದುರಿಸಲು 50 ಲಕ್ಷ ರೂ. ಬಿಡುಗಡೆ ಮಾಡಲಾಗಿದ್ದು, ಅದರ ಸಮರ್ಪಕ ನಿರ್ವಹಣೆಯಾಗುತ್ತಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಗರ ತಾಲೂಕಿಗೆ 40 ಲಕ್ಷ ರೂ.ಹಾಗೂ ಹೊಸನಗರ ತಾಲೂಕಿನ ಎರಡು ಹೋಬಳಿಗೆ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುವ ಸೊರಬ ತಾಲೂಕಿಗೆ ಮೊದಲ ಹಂತದಲ್ಲಿ 1.50 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪುನಃ 50 ಲಕ್ಷ ರೂ.ಬಿಡುಗಡೆ ಮಾಡಲಾಗಿದೆ. ಕಳೆದ ಸಾಲಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರು ಸೇರಿದಂತೆ ಅಗತ್ಯ ಕಾಮಗಾರಿ ಕೈಗೊಳ್ಳಲು ಹಣಕಾಸಿನ ಕೊರತೆ ಇಲ್ಲ ಎಂದು ತಿಳಿಸಿದರು. ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮಾತನಾಡಿ, ತಾಲೂಕಿನಲ್ಲಿ 499 ತೆರೆದ ಬಾವಿಯಿದ್ದು, ಅವೆಲ್ಲ ಬಿಸಿಲಿನ ಝಳಕ್ಕೆ ಒಣಗಿ ಹೋಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಇರುವ ಕಡೆಗಳಲ್ಲಿ ಕೊಳವೆ ಬಾವಿಯನ್ನು ತೆರೆಯುವುದು, ಪೈಪ್‌ಲೈನ್ ಅಳವಡಿಸಲು ಸೂಚನೆ ನೀಡಿದ್ದೇನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಪರಿಹಾರ ಕೆಲಸ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಪಂ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಉಪವಿಭಾಗಾಧಿಕಾರಿ ಡಿ.ಎಂ.ಸತೀಶ್‌ಕುಮಾರ್, ತಹಶೀಲ್ದಾರ್ ಎನ್.ಟಿ.ಧಮೊರ್ ೀಜಿರಾವ್, ತಾಪಂ ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ, ಜಿಪಂ ಸದಸ್ಯೆ ಅನಿತಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.