ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮಕೆಗೊಳಿ್ಳ: ಸಚಿವ ವಿನಯಕುಮಾರ್ ಸೊರಕೆ
ಚಿಕ್ಕಮಗಳೂರು, ಎ.29: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಆಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪೌರಾಡಳಿತ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಜೊತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ಈಗಾಗಲೇ ನಗರ ಮತ್ತು ಪಟ್ಟಣ ಪಂಚಾಯತ್‌ಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದ್ದು, ಅವಶ್ಯವಿದ್ದಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು. ಆದರೆ ನೀಡಿರುವ ಅನುದಾನವನ್ನು ತುರ್ತಾಗಿ ಖರ್ಚು ಮಾಡಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು. ಎಸ್‌ಎಫ್‌ಸಿ, 13 ನೆ ಹಣಕಾಸು, ಶೇ.24 ರಷ್ಟು ಅನುದಾನ, ಹೀಗೆ ಹಲವಾರು ಯೋಜನೆಗಳಿಗೆ ನೀಡಲಾಗಿರುವ ಅನುದಾನಗಳನ್ನು ಪ್ರತಿಶತ 100ರಷ್ಟು ಅನುಷ್ಠಾನಗೊಳಿಸಬೇಕು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಸತಿ ಕಲ್ಪಿಸುವ ಸಂಬಂಧ ಅಂಬೇಡ್ಕರ್ ವಸತಿ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದ ಅವರು, ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ಗೃಹ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದರು.
ಬೀರೂರು ಹಾಗೂ ಮೂಡಿಗೆರೆ ಪಟ್ಟಣ ವ್ಯಾಪ್ತಿಯಲ್ಲಿ ನಗರೋತ್ಥಾನ ಅಡಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದ ಅವರು, ನ.ರಾ.ಪುರ ಪಟ್ಟಣ ಪ್ರದೇಶದ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಂಡಿದ್ದರೂ ಅದರ ಬಳಕೆ ಮಾಡಿಕೊಳ್ಳದಿರುವುದು ಕಂಡು ಬಂದಿದೆ. ಇದನ್ನು ಬಳಕೆಗೆ ಅಗತ್ಯವಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕ ಬಳಕೆಗೆ ಉಪಯೋಗಿಸಿಕೊಳ್ಳಬೇಕೆಂದು ತಿಳಿಸಿದರು.
ಚಿಕ್ಕಮಗಳೂರು ನಗರ ಪ್ರದೇಶದ ಒಳಚರಂಡಿ ಕಾಮಗಾರಿಗಳು ಪೂರ್ಣ ಪ್ರಮಾಣದಲ್ಲಿ ಆಗದೇ ಇರುವ ಬಗ್ಗೆ ಆಕ್ಷೇಪಿಸಿದ ಅವರು, ಶೀಘ್ರದಲ್ಲಿಯೇ ಅವುಗಳನ್ನು ಪೂರ್ಣಗೊಳಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಪಿ.ಷಡಕ್ಷರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ, ನಗರಸಭಾ ಅಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ನಗರಸಭಾ ಆಯುಕ್ತೆ ಪಲ್ಲವಿ, ವಿವಿಧ ತಾಲೂಕುಗಳ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.