ಮೇ 8: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ

Update: 2016-05-03 19:02 GMT

ಮಂಗಳೂರು, ಮೇ 3: ಉಜಿರೆಯ ಎಸ್‌ಡಿಎಂ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮ ವರ್ಷಾಚರಣೆ ಹಿನ್ನೆಲೆಯಲ್ಲಿ ಮೇ 8ರಂದು ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಸಂಯೋಜಕ ಸತೀಶ್ಚಂದ್ರ ಎನ್., ಅಂದು ಸಂಜೆ 4ಕ್ಕೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ, ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ವಸಂತ ಬಂಗೇರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9:30ರಿಂದ ಹಳೆ ವಿದ್ಯಾರ್ಥಿಗಳ ನೋಂದಣಿ ನಡೆಯಲಿದೆ. ಮಧ್ಯಾಹ್ನ ದವರೆಗೆ ಹಳೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂವಾದ, ಹಳೆ ವಿದ್ಯಾರ್ಥಿಗಳ ಪರಿಚಯ ಮಾತುಕತೆ ನಡೆಯಲಿದೆ. ಬಳಿಕ ಹಳೆ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಲಿದ್ದಾರೆ. ಸಭಾಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಹಳೆ ವಿದ್ಯಾರ್ಥಿ ವಿಲಾಸ ನಾಯಕ್‌ರಿಂದ ವರ್ಣ ವಿಲಾಸ ಕಾರ್ಯಕ್ರಮ ಹಾಗೂ ಸಂಜೆ 6:30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹಳೆ ವಿದ್ಯಾರ್ಥಿ ಡಾ.ಅನಂತಕೃಷ್ಣ ಭಟ್, ಸುವರ್ಣ ಮಹೋತ್ಸವ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಗುರುನಾಥ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News