ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ
ಮಂಗಳೂರು, ಮೇ 8: ಕೇರಳ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ 9:45 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿಯವರನ್ನು ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಮಂಗಳೂರು ನಗರ ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಯೋಗೀಶ್ ಭಟ್ ಸ್ವಾಗತಿಸಿದರು.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರುಗಳು ಜಮಾಯಿಸಿದ್ದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾಸರಗೋಡಿಗೆ ತೆರಳಿದರು.
ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿತ್ತು.