ಕೃಷಿ ಹೊಂಡ ಕಾಮಗಾರಿಗಳಿಗೆ ಆದ್ಯತೆ ನೀಡಿ: ಜಯಶ್ರೀ ಮೊಗೇರ
ಕಾರವಾರ, ಮೇ 12: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಹೊಂಡ, ಬೂ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಒತ್ತಾಯಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಗಳು ಉದ್ಯೋಗ ಖಾತ್ರಿ ಅಡಿ ಹೆಚ್ಚಿನ ಕಾಮಗಾರಿಗಳನ್ನು ಸೃಷ್ಟಿಸಬೇಕು. ಕಳೆದ ವರ್ಷ 80 ಸಾವಿರ ಮಾನವ ದಿನಗಳಷ್ಟು ಕೆಲಸಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.
ಬೀಜ ರಸಗೊಬ್ಬರ ದಾಸ್ತಾನು:
ಮಳೆಗಾಲ ಆರಂಭದ ಪೂರ್ವದಲ್ಲೇ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಬೇಕು. ಕಳೆದ ವರ್ಷ ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಕೊರತೆಯಾಗುವ ಸಾಧ್ಯತೆ ಇದ್ದು, ಈಗಲೇ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ರೀತಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇರಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವರದಿ ಸಲ್ಲಿಸಲು ಸೂಚನೆ: ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಕೆಆರ್‌ಐಡಿಎಲ್ ಮೂಲಕ ಜಿಲ್ಲೆಯಲ್ಲಿ ಹಲವು ಇಲಾಖೆಗಳ ನೂರಾರು ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈ ಕುರಿತು ಆಯಾ ಇಲಾಖೆಗಳು ಪರಿಶೀಲನೆ ನಡೆಸಿ ಒಂದು ವಾರದ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದ ಅವರು, ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಶಾಲೆ ಪ್ರಾರಂಭವಾಗುವ ಮೊದಲೇ ಒದಗಿಸಬೇಕು ಎಂದರು. ಈ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಡಿಡಿಪಿಐ ಅವರಿಗೆ ತಿಳಿಸಿದರು.
ಶಿಷ್ಟಾಚಾರ ಪಾಲಿಸಿ: ಎಲ್ಲಾ ಇಲಾಖೆಗಳು ಯಾವುದೇ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಶಿಷ್ಟಾಚಾರ ಪ್ರಕಾರ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರ ಉಲ್ಲಂಘನೆ ಕಂಡು ಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು. ಇದೇ ರೀತಿ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿಯೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ್ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಹಾಗೂ ಇಂಗ್ಲಿಷ್ ಭಾಷಾ ಕೌಶಲ್ಯ, ವೃತ್ತಿಪರ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜುಲೈ ತಿಂಗಳಿನಿಂದ ಈ ಕಾರ್ಯ ಜಿಲ್ಲೆಯ ಎಲ್ಲಾ ಹಾಸ್ಟೆಲ್‌ಗಳಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ನಿಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.