ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರ ಜತೆ ಚರ್ಚೆ: ಸಿಎಂ
ಬೆಂಗಳೂರು, ಮೇ 16: ಸರಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸುವ ಸಂಬಂಧದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿರುವ ಬಗ್ಗೆ ರಾಜ್ಯಪಾಲರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಾನೂನು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಪಾರದರ್ಶಕ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸರಕಾರಿ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ವರ್ಗದವರಿಗೆ 50 ಲಕ್ಷ ರೂ.ವರೆಗೆ ಮೀಸಲಾತಿ ಕಲ್ಪಿಸಲು ಸರಕಾರ ಉದ್ದೇಶಿಸಿತ್ತು.
ಈ ಬಗ್ಗೆ ಸಂಪುಟದಲ್ಲಿ ಒಪ್ಪಿಗೆ ಪಡೆದ ಸುಗ್ರೀವಾಜ್ಞೆ ಅಂಕಿತಕ್ಕೆ ರಾಜ್ಯಪಾಲರಿಗೆ ರವಾನಿಸಲಾಗಿತ್ತು. ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸುಗ್ರೀವಾಜ್ಞೆಗೆ ಸಹಿ ಹಾಕುವಂತೆ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.
ಶೇ.70ರಷ್ಟು ವೆಚ್ಚ ಮಾಡಿ: ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ನವೆಂಬರ್ ಅಂತ್ಯಕ್ಕೆ ಶೇ.70ರಷ್ಟು ಹಣವನ್ನು ವೆಚ್ಚ ಮಾಡಬೇಕು ಎಂದು ಸೂಚಿಸಿದ ಅವರು, ಕೊನೆಯ ಕ್ಷಣದಲ್ಲಿ ಅನುದಾನ ವೆಚ್ಚಕ್ಕೆ ಮುಂದಾದರೆ ಅದು ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತಾಯಂದಿರ ಮರಣದ ಪ್ರಮಾಣ ಹೆಚ್ಚಿದೆ. ರಾಜ್ಯ ಸರಕಾರ ಉಚಿತ ಅಕ್ಕಿ ಮತ್ತು ಹಾಲು ನೀಡುತ್ತಿದ್ದರೂ, ಈ ರೀತಿ ಆಗಲು ಕಾರಣವೇನೆಂದು ಪತ್ತೆಹಚ್ಚಿ, ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕ್ಷೀಣ ಸರಿಯಲ್ಲ. ಈ ವಿಷಯವನ್ನು ಅತ್ಯಂತ ಗಂಭೀರ ಸಮಸ್ಯೆ. ಇದಕ್ಕೆ ಕಾರಣ ತಿಳಿಯಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದರು.