ಪ್ರವಾಹ, ಮಳೆ ಹಾನಿ: ಮುನ್ನೆಚ್ಚರಿಕೆ ವಹಿಸಲು ಡಿಸಿ ಸೂಚನೆ
ಮಡಿಕೇರಿ, ಮೇ 17: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮುಂಗಾರಿನ ಅವಧಿಯಲ್ಲಿ ಅತಿವೃಷ್ಟಿಯಿಂದ ಉಂಟಾಗ ಬಹು ದಾದ ಹಾನಿ ಮತ್ತು ಅನಾಹುತಗಳ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಮಳೆಗಾಲದ ಅವಧಿಯಲ್ಲಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಳೆಯಾಗದೆ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯ ವರದಿಗಳು ಪ್ರಕಟವಾಗುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಬಹುದಾದ ಪ್ರದೇಶಗಳಲ್ಲಿ ಮುನ್ನೆಚ್ಚರಿಕ ಕ್ರಮ ವಹಿಸಲು ಹೆಚ್ಚಿನ ಗಮನ ಹರಿಸಬೇಕೆಂದು ಸೂಚನೆ ನೀಡಿದರು. ಸ್ಥಳಕ್ಕೆ ಭೇಟಿ ನೀಡಿ- ಮಳೆೆಯ ಪ್ರಮಾಣ, ಪ್ರವಾಹ, ದರೆ ಕುಸಿತ, ಜನ, ಜಾನುವಾರುಗಳ ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗುವ ಸಾಧ್ಯತೆಗಳಿರುವ ಹಂತದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಸ್ಪಷ್ಟ ಸೂಚನೆ ನೀಡಿದರು.
ಮಡಿಕೇರಿ ತಾಲೂಕಿನ ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ವೀರಾಜಪೇಟೆ ತಾಲೂಕಿನ ಕರಡಿಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ, ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಸೇರಿದಂತೆ ಹಲವೆಡೆಗಳಲ್ಲಿ ಪ್ರವಾಹ ಏರ್ಪಡುವ ಸಾಧ್ಯತೆಗಳಿವೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರವಾಹದ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನು ತೆರೆಯಬೇಕು ಎಂದರು.
ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ- ನಗರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಬರೆಗಳ ಕೆಳಗೆ ವಾಸಮಾಡುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಿ ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಂ.ಸತೀಶ್ ಕುಮಾರ್ ನಿರ್ದೇಶನ ನೀಡಿದರು. ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸುವಂತೆ ಮತ್ತು ಆ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಿಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸಲಹೆ ನೀಡಿದರು. ಸಹಾಯವಾಣಿ: ಮುಂಗಾರಿನ ಅವಧಿಯ ಅನಾಹುತಗಳ ಬಗ್ಗೆ ಮಾಹಿತಿ ಹಾಗೂ ಸಹಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 7 ಸಹಾಯವಾಣಿ ತೆರೆಯಲಾಗಿದೆ. ಅದೇ ರೀತಿ ತಾಲೂಕು ಕೇಂದ್ರಗಳಲ್ಲಿ ಹಾಗೂ ನಗರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿಯೂ ಸಹಾಯವಾಣಿ ಕೇಂದ್ರ ಆರಂಭಿಸಬೇಕೆಂದು ಸೂಚನೆ ನೀಡಿದರು. ಜಿಪಂ ಸಿಇಒ ಚಾರುಲತಾ ಸೋಮಲ್ ಅವರು ಮಾತನಾಡಿ, ಅಪಾಯ ಸಂಭವಿಸಬಹುದಾದ ಮುನ್ಸೂಚನೆಗಳಿದ್ದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಂಡು ಮಾಹಿತಿ ನೀಡಬೇಕೆಂದು ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚಿದರು. ಅತಿವೃಷ್ಟಿಯಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ದೂರವಾಣಿ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.
ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.