ಕಡ್ಡಾಯ ಶಿಕ್ಷಣ ಕಾಯ್ದೆಯಡಿ ದಾಖಲಾತಿಗೆ ಸೂಚನೆ
ಸಾಗರ, ಮೇ 17: ಶಿಕ್ಷಣ ಇಲಾಖೆಯ ಅಧಿಕಾರಿಗಳು ತಾಲೂಕಿನ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಮಕ್ಕಳನ್ನು ಸರಿಯಾಗಿ ದಾಖಲು ಮಾಡಿಕೊಳ್ಳಲಾಗುತ್ತಿದೆಯೆ ಎಂದು ಪರಿಶೀಲಿಸಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆರ್ಥಿಕವಾಗಿ ಹಿಂದುಳಿದ, ಬಡ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಶಾಲೆಗಳಿಗೆ ಖುದ್ದು ಭೇಟಿ ನೀಡಿ ದಾಖಲಾತಿ ಪಟ್ಟಿ ಪರಿಶೀಲಿಸಿ ಮಾಹಿತಿ ನೀಡಬೇಕೆಂದು ಸೂಚಿಸಿದರು.
ಕೆಲವು ಖಾಸಗಿ ಶಾಲೆಗಳಲ್ಲಿ ಸರಕಾರ ವಿಧಿಸಿರುವ ನಿಯಮಾವಳಿಗಳಿಗಿಂತ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿದ್ದಾರೆ.ಇದರಿಂದ ಬಡವಿದ್ಯಾರ್ಥಿಗಳು ಹಾಗೂ ಪೋಷಕರು ಶೋಷಣೆಗೆ ಒಳಗಾಗುತ್ತಿದ್ದಾರೆ. ಶಿಕ್ಷಕರಿಗೆ ಸಂಬಳ ನೀಡಬೇಕು ಎನ್ನುವ ಕಾರಣ ನೀಡಿ ಖಾಸಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹೆಚ್ಚಿನ ಡೊನೇಷನ್ ವಸೂಲಿ ಮಾಡುತ್ತಿದೆ. ಮಕ್ಕಳ ದಾಖಲಾತಿ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ಒಬ್ಬ ಅಧಿಕಾರಿಯನ್ನು ನೇಮಿಸಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು. ಸರ್ವಶಿಕ್ಷಣ ಅಭಿಯಾನ ಯೋಜನೆ ಯಡಿ ತಾಲೂಕಿನಲ್ಲಿ 44 ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣ ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷರ ಮೂಲಕ ಸರಕಾರದ ಮೇಲೆ ಒತ್ತಡ ತರಲಾಗುವುದು. ಪ್ರತಿಯೊಂದು ಶಾಲೆಯಲ್ಲಿಯೂ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಹೇಳಿದರು. ಶಾಲೆ ಮತ್ತು ಪೋಷಕರ ನಡುವೆ ಉತ್ತಮ ಸಂಬಂಧ ಏರ್ಪಡಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದ ಹಕ್ರೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಸೂಕ್ತ ತರಬೇತಿ ನೀಡಿ, ಅವರು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತೆ ಉತ್ತೇಜನ ನೀಡಬೇಕು. ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಅಗತ್ಯವಿದೆ. ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳನ್ನು ಪುನಃ ಶಾಲೆಗೆ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಯೋಜನೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪರಶುರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲಿಂಗಪ್ಪ, ಸರ್ವಶಿಕ್ಷಣ ಅಭಿಯಾನದ ಸಮನ್ವಯಾಧಿಕಾರಿ ವೈ.ಗಣೇಶ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.