×
Ad

ಕೊಡಗು ಬರ ಪೀಡಿತ ಪ್ರದೇಶ: ಜಿಪಂ ನಿರ್ಣಯ

Update: 2016-05-19 22:34 IST

ಮಡಿಕೇರಿ, ಮೇ 19: ರಾಜ್ಯದ ಇತರ ಭಾಗ ಗಳಂತೆ ಕೊಡಗು ಜಿಲ್ಲೆಯಲ್ಲಿ ಕೂಡ ಬರದ ಪರಿಸ್ಥಿತಿ ಮೂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಮತ್ತು ರೈತರು ಹಾಗೂ ಬೆಳೆಗಾರರ ಸಾಲ ಮನ್ನಾಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲು ಜಿಪಂ ವಿಶೇಷ ಸಭೆ ನಿರ್ಣಯ ಕೈಗೊಂಡಿದೆ.

ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಲು ಜಿಪಂ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇದ್ದರೂ ಅಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಸಭೆಯಲ್ಲಿ ಪಕ್ಷಾತೀತವಾಗಿ ಸರ್ವ ಸದಸ್ಯರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು. ಜಿಪಂ ಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನುದಾನದ ಕೊರತೆ ಇರುವ ಬಗ್ಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಸಭೆಯ ಗಮನ ಸೆಳೆದರು. ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಜಿಲ್ಲಾಧಿ ಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆರೋಪಿಸಿದ ಸರ್ವ ಸದಸ್ಯರು ಇವರಿಬ್ಬರ ವೈಫಲ್ಯತೆ ಕುರಿತು ಸರಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದರು.

ಈ ನಡುವೆ ಅಧ್ಯಕ್ಷ ಬಿ.ಎ. ಹರೀಶ್ ಮಾತನಾಡಿ, ಮೂರು ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಕುಡಿಯುವ ನೀರಿನ ಕಾಮಗಾರಿಗಳಿಗೆ 1 ಕೋಟಿ ರೂ. ಬಿಡುಗಡೆ ಮಾಡಬೇಕು ಮತ್ತು ಮುಂದಿನ ಏಳು ದಿನಗಳ ಒಳಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

*ಅನುಭವಿಗಳಂತೆ ಅಧಿಕಾರಿಗಳ ಬೆವರಿಳಿಸಿದ ಸದಸ್ಯರು: ಜಿಪಂ ನಲ್ಲಿ ಬಹುತೇಕ ಸದಸ್ಯರು ಹೊಸಬರಾದರೂ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸರ್ವ ಸದಸ್ಯರು ಅಧಿಕಾರಿಗಳ ಬೆವರಿಳಿಸಿದರು. ಅಧಿಕಾರಿಗಳ ನಿರ್ಲಕ್ಷ್ಯತೆ ವಿರುದ್ಧ ಸಭೆಯ ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಪ್ರಥ್ಯು, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಈಗಾಗಲೆ ಅನೇಕ ಸಭೆಗಳು ನಡೆದಿವೆ. ಕುಡಿಯುವ ನೀರಿಗೆ ಅನುದಾನದ ಕೊರತೆ ಇಲ್ಲವೆಂದು ಹೇಳಲಾಗುತ್ತಿದೆ. ಆದರೆ, ಎಲ್ಲಿಯೂ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಂಡಿಲ್ಲ. ವೀರಾಜಪೇಟೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ನಾಲ್ಕು, ಐದು ತಿಂಗಳುಗಳೆ ಕಳೆದಿದ್ದರೂ ಇಲ್ಲಿ ಯಾವುದೇ ಅನುದಾನ ವಿನಿಯೋಗವಾಗುತ್ತಿಲ್ಲ. ಇನ್ನು ಕೇವಲ 10 ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಈ ಸಭೆಯ ಅಗತ್ಯವೇನಿದೆಯೆಂದು ಪ್ರಶ್ನಿಸಿದರು.

ಬಿಜೆಪಿ ಸದಸ್ಯ ಎಂ.ಪಿ.ಸುಬ್ರಮಣಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪೊನ್ನಂಪೇಟೆಯಲ್ಲಿ ಸಭೆ ನಡೆಸಲಾಯಿತಾದರೂ ಇಲ್ಲಿಯವರೆಗೆ ಈ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸದಸ್ಯ ವಿಜು ಸುಬ್ರಮಣಿ ಮಾತನಾಡಿ, ಮಳೆಗಾಲ ಸಮೀಪಿಸುತ್ತಿರುವ ಹಂತದಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಆರಂಭಿಸಲು ಮುಂದಾಗಿದ್ದು, ಇದು ಅವೈಜ್ಞಾನಿಕ ಕ್ರಮವಾಗಿದೆಯೆಂದು ಅಸಮಾಧಾನ ವ್ಯಕ್ತಪಡಿಸಿದರು.

       ಕಾಂಗ್ರೆಸ್ ಸದಸ್ಯೆ ಕೆ.ಪಿ. ಚಂದ್ರಕಲಾ ಮಾತನಾಡಿ, ಅಧಿಕಾರಿಗಳು ಯಾವುದೇ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿದ್ದು, ಈ ತುರ್ತು ಸಭೆಯ ಅಗತ್ಯವಿರಲಿಲ್ಲವೆಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಮಾತನಾಡಿದ ಚಾರುಲತಾ ಸೋಮಲ್, ಈಗಾಗಲೆ 22 ಕೊಟಿ ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, 15.50 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ. ಗುತ್ತಿಗೆದಾರರಿಗೆ ಹಣ ನೀಡಲು ಬಾಕಿ ಇರುವ ಸಮಸ್ಯೆ ಇಡೀ ರಾಜ್ಯವ್ಯಾಪಿ ಇದ್ದು, ಸದ್ಯದಲ್ಲೆ ಜಿಲ್ಲೆಗೆಯ ಗುತ್ತಿಗೆದಾರರಿಗೆ ಹಣ ಪಾವತಿಸಲು 3 ಕೋಟಿ ರೂ. ಬಿಡುಗಡೆಯಾಗಲಿದೆ ಎಂದರು.

ಈ ನಡುವೆ ಇಂಜಿನಿಯರ್‌ಗಳು ನೀಡುತ್ತಿದ್ದ ಸಮಜಾಯಿಷಿಕೆಗೆ ಉಪಾಧ್ಯಕ್ಷೆ ಲೋಕೇ ಶ್ವರಿ ಗೋಪಾಲ್ ತೀವ್ರ ಅಸಮಾಧಾನ ವ್ಯಕ್ತಪ ಡಿಸಿದರು.

ಭೆಯಲ್ಲಿ ಮುಖ್ಯ ಕಾರ್ಯನಿರ್ವ ಹಣಾಧಿ ಕಾರಿ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧವೆ ಹೆಚ್ಚಿನ ಅಸಮಾಧಾನ ವ್ಯಕ್ತವಾದಾಗ ಮಧ್ಯಪ್ರವೇಶಿಸಿ ಮಾತನಾಡಿದ ಅಧ್ಯಕ್ಷ ಬಿ.ಎ. ಹರೀಶ್, ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ 7ದಿನ ಮತ್ತು ಜಿಲ್ಲಾಧಿಕಾರಿಗಳಿಗೆ ಮೂರು ದಿನ ಸಮಯಾವಕಾಶ ನೀಡಲು ನಿರ್ಧರಿಸಿದರು.

ನಂತರ ಸದಸ್ಯ ಮಹೇಶ್ ಮಾತನಾಡಿದರು. ಈ ನಡುವೆ ಮಾತನಾಡಿದ ಕಾಂಗ್ರೆಸ್ ಸದಸ್ಯೆ ಸರಿತಾ ಪೂಣಚ್ಚ, ಕೊಡಗನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ಬೆಳೆಗಾರರ ಮತ್ತು ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News