×
Ad

ಪರಿಸರ ಪೂರಕ ಸಣ್ಣ ಕೈಗಾರಿಕೆ ಸ್ಥಾಪನೆಗೆ ಸಹಕಾರ ಸಚಿವ ಸತೀಶ್ ಜಾರಕಿಹೊಳಿ ಭರವಸೆ

Update: 2016-05-24 22:32 IST

 ಮಡಿಕೇರಿ, ಮೇ 24 : ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕವಾದ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಮಿ ಒದಗಿಸುವುದರೊಂದಿಗೆ ಆರ್ಥಿಕ ನೆರವು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಸರಕಾರದ ಯೋಜನೆಗಳಿಗೆ ಖಾಸಗಿ ಭೂಮಿಯನ್ನು ಮಾರುಕಟ್ಟೆ ದರದಲ್ಲಿ ಕೈಗಾರಿಕೆಗಳಿಗೆ ಅಗತ್ಯ ಇರುವ ಕಡೆ ಭೂಮಿ ಖರೀದಿಸಬಹುದಾಗಿದೆ. ಆ ನಿಟ್ಟಿನಲ್ಲಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.

ಜಿಲ್ಲೆಯಲ್ಲಿ ಫುಡ್ ಕ್ಲಸ್ಟರ್, ಜೇನು ಸಾಕಣೆ ಮತ್ತು ಹಣ್ಣು ಸಂರಕ್ಷಣೆ ಮಾಡಿ ಜ್ಯೂಸ್ ತಯಾರಿಕೆಗೆ ಹೆಚ್ಚಿನ ಅವಕಾಶಗಳಿದ್ದು, ಇಂತಹ ಸಣ್ಣ ಉದ್ಯಮಗಳ ಪ್ರಸ್ತಾವನೆಗೆ ಈಗಾಗಲೇ ರಾಜ್ಯ ಸರಕಾರ ಅನುಮತಿ ನೀಡಿದೆ ಎಂದರು.

 ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಅನುಷ್ಠಾನಗೊಳಿಸಲಾಗುವುದು. ಸಣ್ಣ ಕೈಗಾರಿಕೆಗಳ ಬೆಳವಣಿಗೆ, ಸ್ಥಳೀಯರಿಗೆ ಉದ್ಯೋಗಾವಕಾಶ, ಸಣ್ಣ ಉದ್ಯಮಗಳಿಗೆ ಹೆಚ್ಚಿನ ಆರ್ಥಿಕ ಸಹಾಯ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ರಾಮಕೃಷ್ಣ ಗೌಡ ಮಾತನಾಡಿ, ಜಿಲ್ಲೆಯಲ್ಲಿ ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಕೈಗಾರಿಕಾ ವಸಾಹತುಗಳಿದ್ದು, ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಸಹಕಾರ ನೀಡಲಾಗುತ್ತದೆ ಎಂದರು.

ಛೇಂಬರ್ ಆಫ್ ಕಾಮರ್ಸ್‌ನ ಜಿಲ್ಲಾ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್ ಮಾತನಾಡಿ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಜವುಳಿ ಪಾರ್ಕ್ ಸ್ಥಾಪಿಸಬೇಕಿದೆ. ವಿರಾಜಪೇಟೆ ತಾಲೂಕಿನ ಮಡಿಕೆಬೀಡು ಬಳಿ ಹೆಂಚು ಕಾರ್ಖಾನೆ ಮುಚ್ಚಿದ್ದು, ಇದನ್ನು ಪುನಶ್ಚೇತನಗೊಳಿಸಿ ಕುಂಬಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದರು

ಛೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಜಿ.ಜಿದ್ವಿಲಾಸ್, ಜಲ್ಲಾ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಉದ್ಯಮಿ ಮುಳಿಯ ಕೇಶವ ಪ್ರಸಾದ್, ಛೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್ ಮತ್ತು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೂರಯ್ಯಾ ಅಬ್ರಾರ್ ಅವರು ಸಣ್ಣ ಕೈಗಾರಿಕೆಗಳ ಬೆಳವಣಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್, ರಾಜ್ಯ ಹಣಕಾಸು ಅಭಿವೃದ್ಧಿ ನಿಗಮ ಮತ್ತಿತರ ಇಲಾಖಾ ಅಧಿಕಾರಿಗಳು ತಮ್ಮ ಇಲಾಖಾ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ವೀಣಾ ಅಚ್ಚಯ್ಯ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ವಿಶ್ವನಾಥ್ ತಮ್ಮ ಇಲಾಖೆಗಳ ಮಾಹಿತಿ ನೀಡಿದರು.

 ಸಭೆಯ ಬಳಿಕ ವಿವಿಧ ಸಣ್ಣ ಕೈಗಾರಿಕಾ ಘಟಕಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News