ಜನಸ್ಪಂದನ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ: ಬಿ.ಬಿ.ನಿಂಗಯ್ಯ

Update: 2016-05-29 16:59 GMT

ಚಿಕ್ಕಮಗಳೂರು, ಮೇ 29: ಜನಸ್ಪಂದನ ಕಾರ್ಯಕ್ರಮಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆೆ ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದ್ದಾರೆ.

ಅವರು ತಾಲೂಕಿನ ಆವತಿಯಲ್ಲಿ ನಡೆದ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಗೆ ಬಹಳಷ್ಟು ಅಧಿಕಾರಿಗಳು ಗೈರಾಗಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅಂತಹ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಹಾಗೂ ಮುಂದಿನ ಸಭೆಗೆ ಹಾಜರಾಗದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ತಿಂಗಳಿಗೆ ಒಂದು ಬಾರಿ ಮಾತ್ರ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕಾದ ಅಧಿಕಾರಿಗಳೇ ಬಾರದಿದ್ದರೆ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸುವವರು ಮತ್ತು ಅವರ ಸಮಸ್ಯೆಗಳನ್ನು ನಿವಾರಿಸುವವರು ಯಾರು ಎಂದು ಪ್ರಶ್ನಿಸಿದ ಅವರು, ಸಭೆಗೆ ಬಹಳಷ್ಟು ಅಧಿಕಾರಿಗಳು ಗೈರಾಗಿರುವುದು ಜನಪ್ರತಿನಿಧಿಗಳು ಮತ್ತು ಸಭೆಗೆ ಮಾಡಿದ ಅವಮಾನವಾಗಿದೆ ಎಂದರು.

ಆವತಿ, ದಾನಿಹಳ್ಳಿ ಮತ್ತು ಬೈಗೂರಿನಲ್ಲಿ ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ತಪ್ಪಿ ತಸ್ಥ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ದಾನಿಹಳ್ಳಿಯಲ್ಲಿ ನಡೆದಿರುವ ನಿವೇಶನ ಹಗರಣದ ಬಗ್ಗೆ ತನಿಖೆ ನಡೆಸಬೇಕು. ಕುಡಿಯುವ ನೀರಿನ ಕಾಮಗಾರಿಗಾಗಿ ಆವತಿ ಹೋಬಳಿಗೆ ಈಗಾಗಲೇ 90 ಲಕ್ಷ ರೂ. ನೀಡಲಾಗಿದ್ದು, ಇದೀಗ 60 ಲಕ್ಷ ರೂ. ಹಣ ಬಿಡುಗಡೆಯಾಗಿದೆ ಎಂದ ಅವರು ಪಿಡಿಒಗಳು ಪ್ರಸ್ತಾವನೆ ಸಲ್ಲಿಸಿದ್ದಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದರು.

 ಸಭೆಗೆ ಹಾಜರಾಗದಿದ್ದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಯಿತು. ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಭೆಗೆ ಕರೆ ತರುವಂತೆ ಅಥವಾ ಸಭೆಯನ್ನು ರದ್ದುಪಡಿಸಿ ಮತ್ತೊಂದು ದಿನ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ವೃದ್ದಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ಹಲವು ಸವಲತ್ತುಗಳನ್ನು ಶಾಸಕ ಬಿ.ಬಿ.ನಿಂಗಯ್ಯ ವಿತರಿಸಿದರು. ಸಭೆಯಲ್ಲಿ ಜಿಪಂ ಸದಸ್ಯೆ ಕವಿತಾ, ತಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಸುರೇಶ್, ಸದಸ್ಯರಾದ ಶಾರದಾ, ಜಯಣ್ಣ, ತಾಪಂ ಇಒ ಧನರಾಜ್, ತಹಶೀಲ್ದಾರ್ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News