×
Ad

ರಸ್ತೆ ವಿಸ್ತರಣೆ ವಿಳಂಬ: ಸಾರ್ವಜನಿಕರಿಂದ ಪ್ರತಿಭಟನೆ

Update: 2016-05-30 22:06 IST

ಮಡಿಕೇರಿ, ಮೇ 30: ನಗರದ ಮಹದೇವಪೇಟೆ ರಸ್ತೆ ವಿಸ್ತರಣೆ ಕಾರ್ಯ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ವರ್ತಕರು ಇಂದಿರಾಗಾಂಧಿ ವೃತ್ತದಲ್ಲಿ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿದರು. ತರಾತುರಿಯಲ್ಲಿ ರಸ್ತೆ ವಿಸ್ತರಣೆ ಕಾರ್ಯವನ್ನು ಆರಂಭಿಸಲಾಗಿದ್ದು, ಇದೀಗ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದರಿಂದ ವರ್ತಕರು ನಷ್ಟ ಅನುಭವಿಸುತ್ತಿದ್ದಾರೆ. ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳು ಕೂಡ ಸಮಸ್ಯೆಯನ್ನು ಎದುರಿಸುತ್ತಿದ್ದು, ನಗರಸಭೆ ತಕ್ಷಣ ಕಾಮಗಾರಿಯನ್ನು ಚುರುಕುಗೊಳಿಸಬೇಕೆಂದು ಒತ್ತಾಯಿಸಿದರು. ಚರಂಡಿ ಮತ್ತು ಒಳಚರಂಡಿ ಕಾರ್ಯ ಅವೈಜ್ಞಾನಿಕವಾಗಿದ್ದು, ಮಳೆಗಾಲದಲ್ಲಿ ಅವ್ಯವಸ್ಥೆ ಎದುರಾಗಬಹುದೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ನಗರ ಸಭಾಧ್ಯಕ್ಷೆ ಶ್ರೀಮತಿ ಬಂಗೇರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚೇಂಬರ್ ಆಫ್ ಕಾಮರ್ಸ್‌ನ ಪ್ರಮುಖ ಜಿ.ಚಿದ್ವಿಲಾಸ್, ಅಂಬೆಕಲ್ಲು ನವೀನ್ ಕುಶಾಲಪ್ಪ, ಅರುಣ್ ಕುಮಾರ್, ರಾಜೇಶ್ ಮತ್ತಿತರ ಪ್ರಮುಖರು ಹಾಜರಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

  ಸದಸ್ಯರ ತುರ್ತು ಸಭೆ ಕರೆದು ರಸ್ತೆ ವಿಸ್ತರಣೆ ಕಾರ್ಯವನ್ನು ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಗರಸಭಾಧ್ಯಕ್ಷೆ ಶ್ರೀಮತಿ ಬಂಗೇರ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News