×
Ad

ಒಣ ಪ್ರತಿಷ್ಠೆ ಬಿಟ್ಟು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ: ದೇವರಾಜ್

Update: 2016-05-30 22:15 IST

ಚಿಕ್ಕಮಗಳೂರು, ಮೇ 30: ಶಿಕ್ಷಣದ ಆರ್ಥಿಕ ಹೊರೆಯಿಂದ ಪಾರಾಗಲು ಪೋಷಕರು ಒಣ ಪ್ರತಿಷ್ಠೆಯನ್ನು ಬಿಟ್ಟು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ನಗರಸಭೆ ಅಧ್ಯಕ್ಷ ದೇವರಾಜ್ ಶೆಟ್ಟಿ ಸಲಹೆ ನೀಡಿದ್ದಾರೆ.

 ನಗರದ ಆಝಾದ್ ಪಾರ್ಕ್ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೋಷಕರು ಒಣ ಪ್ರತಿಷ್ಠೆಗಾಗಿ ಕೈಲಾಗದಿದ್ದರೂ ಸಾಲಸೋಲ ಮಾಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದಾಗಿ ಆರ್ಥಿಕ ಹೊರೆ ಹೊತ್ತು ಪರದಾಡುತ್ತಿದ್ದಾರೆ. ಇತ್ತ ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರಕಾರಿ ಶಾಲೆಗಳನ್ನು ಮುಚ್ಚುವಂತಾಗಿದೆ ಎಂದು ವಿಷಾದಿಸಿದರು.

ಖಾಸಗಿ ಶಾಲೆಗಳಂತೆ ಸರಕಾರಿ ಶಾಲೆಗಳಲ್ಲೂ ಇಂದು ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಸೈಕಲ್ ಸೇರಿದಂತೆ ಹಲವು ಸವಲತ್ತುಗಳ ಜೊತೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳಂತೆ ಸರಕಾರಿ ಶಾಲೆ ವಿದ್ಯಾರ್ಥಿಗಳೂ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಪೋಷಕರು ಇದನ್ನು ಅರ್ಥ ಮಾಡಿಕೊಂಡು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ನಗರಸಭೆ ಅಧ್ಯಕ್ಷರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಕಿ ಸಾವಿತ್ರಿ ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಎಸ್.ಇ. ಲೋಕೇಶ್ವರಾಚಾರ್ ನಿರೂಪಿಸಿದರು, ಟಿ.ಆರ್.ನಾಗವೇಣಿ ಸ್ವಾಗತಿಸಿದರು, ಜಯಂತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News