ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ
ಮಡಿಕೇರಿ, ಜೂ.1: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸರಕಾರದ ಆದೇಶದಂತೆ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೊಡಗು ಸಾಂಸ್ಕೃತಿಕವಾಗಿ, ಐತಿಹಾಸಿಕವಾಗಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಕ್ರೀಡೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.
ಅಭಿವೃದ್ಧಿ ನಿರಂತರವಾಗಿದ್ದು, ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಗಳ ಸಂಬಂಧ ಚಿಂತನೆ ಮಾಡಿ ಜನಪರವಾಗಿ ಕಾರ್ಯ ನಿರ್ವಹಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಈ ಹಿಂದೆ ರಾಯಚೂರು ಜಿಲ್ಲೆಯಲ್ಲಿ ಜಿಪಂ ಸಿಇಒ ಹುದ್ದೆ ನಿಭಾಯಿಸಿದ್ದು, ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.
ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಉಪಸ್ಥಿತರಿದ್ದರು.