ಸರಕಾರಿ ನೌಕರರ ಮುಷ್ಕರಕ್ಕೆ ಬೆಳ್ತಂಗಡಿಯಲ್ಲಿ ಉತ್ತಮ ಸ್ಪಂದನೆ
ಬೆಳ್ತಂಗಡಿ, ಜೂ.2: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರಕಾರಿ ನೌಕರರು ಕರೆ ನೀಡಿದ್ದ ಒಂದು ದಿನದ ಮುಷ್ಕರಕ್ಕೆ ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ತಾಲೂಕಿನ ಸರಕಾರಿ ಕಚೇರಿಗಳಲ್ಲಿ ಇಂದು ಯಾವುದೇ ಅಧಿಕಾರಿಗಳಾಗಲಿ, ಸಿಬ್ಬಂದಿಯಾಗಲಿ ಕೆಲಸಕ್ಕೆ ಹಾಜರಾಗಲಿಲ್ಲ. ಎಲ್ಲ ಕಚೇರಿಗಳೂ ಬಾಗಿಲು ಮುಚ್ಚಿದ್ದವು. ಶಿಕ್ಷಕರು ಮುಷ್ಕರದಲ್ಲಿ ಭಾಗವಹಿಸಿದ್ದ ಹಿನ್ನಲೆಯಲ್ಲಿ ಶಾಲೆಗಳೂ ಸ್ಥಗಿತಗೊಂಡವು. ಸರಕಾರಿ ನೌಕರರು ಬೆಳ್ತಂಗಡಿ ತಾಲೂಕು ಕಚೇರಿಯ ಮುಂದೆ ಸಭೆ ನಡೆಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರರ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಕೀರ್ತಿ ಜೈನ್, ಇದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ರಾಜ್ಯದಲ್ಲಿರುವ ವೇತನ ತಾರತಮ್ಯವನ್ನು ಹೋಗಲಾಡಿಸಬೇಕು ಹಾಗೂ ಇತರ ಬೇಡಿಕೆಗಳನ್ನು ಸರಕಾರದ ಮುಂದೆ ಮಂಡಿಸಿ ಗಮನ ಸೆಳೆಯುವ ಪ್ರಯತ್ನವಾಗಿದೆ ಎಂದರು. ತಾಲೂಕಿನ ಎಲ್ಲ ನೌಕರರು ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ಬೆಂಬಲ ನೀಡಿದ್ದು ಸರಕಾರ ಇನ್ನಾದರೂ ನೌಕರರ ಸಮಸ್ಯೆಗಳತ್ತ ಗಮನ ಹರಿಸಲಿ ಎಂದು ಆಗ್ರಹಿಸಿದರು.
ಬಳಿಕ ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸಿ.ಆರ್.ನರೇಂದ್ರ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.