ಕೊಡಗಿನ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಸ್ತಬ್ಧ
ಮಡಿಕೇರಿ, ಜೂ.2: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಎಲ್ಲ ರಾಜ್ಯ ಸರಕಾರಿ ನೌಕರರು ಕಚೇರಿಗೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಕೇಂದ್ರದ ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನ, ಭತ್ತೆ ಹಾಗೂ ಇತರೆ ಸೌಲಭ್ಯಗಳನ್ನು ನೀಡಬೇಕೆಂಬ ಬೇಡಿಕೆ ಮುಂದಿಟ್ಟು ಜಿಲ್ಲೆಯ ಎಲ್ಲ ಸರಕಾರಿ ಕಚೇರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಗೈರು ಹಾಜರಾಗಿದ್ದ ಕಾರಣ ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ಸರಕಾರಿ ಕೆಲಸ ಸ್ತಬ್ಧವಾಗಿತ್ತು. ನೌಕರರ ಮುಷ್ಕರದಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕರೆಯ ಮೇರೆಗೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಜಿಲ್ಲಾ ಉಪನ್ಯಾಸಕರುಗಳ ಸಂಘ, ಅನುದಾನಿತ ಶಾಲಾ ನೌಕರರ ಸಂಘ, ಎಲ್ಲಾ ಇಲಾಖೆಗಳ ವೃಂದ ಸಂಘಗಳು ಮುಷ್ಕರಕ್ಕೆ ಕೈಜೋಡಿಸಿದ್ದರಿಂದಾಗಿ ಮುಷ್ಕರ ಬಹುತೇಕ ಯಶಸ್ವಿಯಾಯಿತು.
ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ.ರವಿ, ಗೌರವಾಧ್ಯಕ್ಷ ಕೆ.ಜೆ.ಮಹೇಶ್, ರಾಜ್ಯ ಪರಿಷತ್ ಸದಸ್ಯ ಪಿ.ಡಿ.ರಾಜೇಶ್, ಪ್ರಧಾನ ಕಾರ್ಯದರ್ಶಿ ಎನ್.ಟಿ.ಮುತ್ತಣ್ಣ, ಖಜಾಂಚಿ ಎನ್.ಯು.ಯೋಗೇಶ್, ಉಪಾಧ್ಯಕ್ಷ ಅಯ್ಯಣ್ಣ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್ ಅವರ ನೇತೃತ್ವದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾದ ನೌಕರರು ನಗರದ ಕೋಟೆ ಆವರಣದಲ್ಲಿ ಸಮಾವೇಶಗೊಂಡರು. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿವಿಧ ಸಂಘಟನೆಗಳ ಪ್ರಮುಖರು, ಕೇಂದ್ರ ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನ, ಭತ್ತೆ ಹಾಗೂ ಇತರೆ ಸೌಲಭ್ಯಗಳನ್ನು ರಾಜ್ಯ ಸರಕಾರಿ ನೌಕರರಿಗೂ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಕೆೇಂದ್ರ ಸರಕಾರ ಪ್ರಸಕ್ತ ಸಾಲಿನ ಜನವರಿ 1ರಿಂದ ಅನ್ವಯವಾಗುವಂತೆ ಕೇಂದ್ರ ಸರಕಾರಿ ನೌಕರರ ವೇತನ ಹಾಗೂ ಭತ್ತೆಗಳಲ್ಲಿ ಶೇಕಡಾ 23.55ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ವಾಸ್ತವಾಂಶ ಹೀಗಿದ್ದರೂ ರಾಜ್ಯ ಸರಕಾರ ರಾಜ್ಯ ಸರಕಾರಿ ನೌಕರರ ಹಿತಾಸಕ್ತಿ ಕಾಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.