ಪ್ರವಾಹ ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ, ಜೂ.3: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ನಿರ್ದೇಶನ ನೀಡಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾವೇರಿ ನದಿ ಪಾತ್ರದ ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರ ತೆರೆಯುವುದು, ನಿರಾಶ್ರಿತರನ್ನು ಸ್ಥಳಾಂತರ ಮಾಡುವುದು ಮತ್ತಿತರ ಕಾರ್ಯಗಳನ್ನು ಚುರುಕಿನಿಂದ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಆಯಾಯ ಪ್ರದೇಶದ ವ್ಯಾಪ್ತಿಯಲ್ಲಿ ಅಧಿಕಾರಿಗಳ ತಂಡವನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದ ಆಯಾಯ ಪ್ರದೇಶದ ತಂಡದವರು ಪ್ರವಾಹ, ಮಳೆಹಾನಿ ಸಂಬಂಧಿಸಿದಂತೆ ತ್ವರಿತವಾಗಿ ಮಾಹಿತಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ಮರಗಳು, ರಸ್ತೆ ಮೇಲೆ ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು. ಹೋಂ ಗಾರ್ಡ್‌ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಪ್ರವಾಹ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರದಲ್ಲಿ ಗುಣಮಟ್ಟದ ಆಹಾರ, ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಅನಾಹುತಗಳನ್ನು ತಡೆಯಲು ಎಸ್ಪಿ ಸೂಚನೆ:
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಮಾತನಾಡಿ ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಅನಾಹುತಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದು ಹೇಳಿದರು.
ಸ್ಥಳೀಯ ಪೊಲೀಸ್ ಅಧಿಕಾರಿಗಳು, ಅರಣ್ಯ, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಲೋಕೋಪಯೋಗಿ, ಸೆಸ್ಕ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತಿತರ ಇಲಾಖೆಗಳ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಬೇಕಿದೆ ಎಂದರು. ಜಿಪಂ ಸಿಇಒ ಚಾರುಲತಾ ಸೋಮಲ್ ಗ್ರಾಪಂ ಮಟ್ಟದಲ್ಲಿ ಪಿಡಿಒಗಳು ಇತರೆ ಇಲಾಖಾ ಅಧಿಕಾರಿಗಳೊಂದಿಗೆ ಸಹಕರಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಡಕುಂಡಲು, ಉಪವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡರ್ ಚಂಗಪ್ಪ, ಅಗ್ನಿಶಾಮಕ ದಳದ ಅಧಿಕಾರಿ ಚಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಸೆಸ್ಕ್ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉಪಸ್ಥಿತರಿದ್ದರು.