ಸುಳ್ಯದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ
ಸುಳ್ಯ, ಜೂ. 5: ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೂರನೆ ವರ್ಷದ ತಾಲೂಕು ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಸುಳ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿ ಹಾಗೂ ಗ್ರಾಮ ಪಂಚಾಂುತ್ ನೌಕರರ ಸಂಘ ಸುಳ್ಯ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸುಳ್ಯ, ಯುವಜನ ಸಂಯುಕ್ತ ಮಂಡಳಿ, ಬೆನಕ ಕ್ರೀಡಾ ಮತ್ತು ಕಲಾ ಸಂಘ ಸುಳ್ಯ ವೀರಕೇಸರಿ ರಿಕ್ಷಾ ಚಾಲಕ ಮಾಲಕರ ಬಳಗ ಸುಳ್ಯ ಇವರ ಪ್ರಾಯೋಜಕತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಶಾಸಕ ಎಸ್. ಅಂಗಾರ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದು ಪುಣ್ಯದ ಕೆಲಸ. ಇದರಿಂದ ಪುಣ್ಯ ಸಂಪಾದನೆ ಸಾಧ್ಯ. ಕಷ್ಟದಲ್ಲಿರುವ ರೋಗಿಗಳು ಯಶಸ್ಸನ್ನು ಕಾಣಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್.ಉಮೇಶ್ ವಹಿಸಿ ಮಾತನಾಡಿದರು.
ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ದ.ಕ.ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರುಗಳ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಅಧ್ಯಕ್ಷ ಹರೀಶ್ ಉಬರಡ್ಕ, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ಡಾ.ರಜನೀಶ್, ಡಾ. ರಂಜನಿ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಭವಾನಿಶಂಕರ ಮುಖ್ಯ ಅತಿಥಿಗಳಾಗಿದ್ದರು.
ಸುಳ್ಯ ತಾಲೂಕು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷ ಪುರುಷೋತ್ತಮ ಮಣಿಯಾನ ಸ್ವಾಗತಿಸಿ, ಬಾಳಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿ, ಗೌರವಾಧ್ಯಕ್ಷ ಶೇಖರ್ ಯು.ಡಿ. ವಂದಿಸಿದರು.