ಜಿಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಹೈಕೋರ್ಟ್ ನೋಟಿಸ್ ಜಾರಿ

Update: 2016-06-08 17:09 GMT

ಬೆಂಗಳೂರು, ಜೂ.8: ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎಲ್ಲ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.
ಈ ಸಂಬಂಧ ಹಾಸನ ಜಿಲ್ಲಾ ಪಂಚಾಯತ್‌ನ 23 ಕ್ಷೇತ್ರಗಳಿಂದ ಆಯ್ಕೆಯಾಗಿರುವ ಜೆಡಿಎಸ್ ಸದಸ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ನ್ಯಾಯಪೀಠ. ಈ ಆದೇಶ ನೀಡಿದೆ.
 ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್. ಪಾಟೀಲ್, ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಪಂಚಾಯತ್‌ಗಳಿಗೆ ಈಗಾಗಲೇ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕ್ಷರನ್ನೂ ಈ ಪ್ರಕರಣದಲ್ಲಿ ಸೇರ್ಪಡೆ ಮಾಡಿಕೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದರು. ಒಂದು ವೇಳೆ ಈ ಪ್ರಕರಣದಲ್ಲಿ ನ್ಯಾಯಾಲಯ ಮೂಲ ಅರ್ಜಿಯನ್ನು ಮಾನ್ಯ ಮಾಡಿ ಈಗಿರುವ ಮೀಸಲು ನಿಗದಿ ತಪ್ಪೆಂದು ಘೋಷಿಸಿದರೆ ಭವಿಷ್ಯದಲ್ಲಿ ಈಗ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕ್ಷರು ಕೋರ್ಟ್ ಮೆಟ್ಟಿಲೇರಬಹುದು. ನಮ್ಮ ಗಮನಕ್ಕೆ ತಾರದಂತೆ ಈ ಆದೇಶ ಬಂದಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂಬ ತಕರಾರು ತೆಗೆಯಬಹುದು. ಹೀಗಾಗಿ, ಎಲ್ಲರನ್ನೂ ಈ ಪ್ರಕರಣದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ಪೀಠವು 30 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News