ಮಹಿಳಾ ಸಂರಕ್ಷಣಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರಕ್ಕೆ ಚಿಂತನೆ: ಉಮಾಶ್ರೀ
ಬೆಂಗಳೂರು, ಜೂ. 17: ಮಹಿಳಾ ಸಂರಕ್ಷಣಾಧಿಕಾರಿಗಳಿಗೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಪ್ರಕರಣಗಳಲ್ಲಿ ಕಾರ್ಯ ನಿರ್ವಹಿಸುವ ವೇಳೆ ಹೆಚ್ಚಿನ ಅಧಿಕಾರ ಬೇಕಾಗುತ್ತದೆ. ಆದುದರಿಂದ ಅವರಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಮಹಿಳಾ ಸಂರಕ್ಷಣಾಧಿಕಾರಿಗಳು ಮತ್ತು ಮಹಿಳಾ ಕಲ್ಯಾಣಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 2011ರಿಂದ ಸುಮಾರು 15 ಸಾವಿರ ಕೌಟುಂಬಿಕ ದೌರ್ಜನ್ಯ ಕಾಯ್ದೆ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿವೆ.
ಈ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಲು ನ್ಯಾಯಾಂಗದ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು. ಅನೇಕ ಪ್ರಕರಣಗಳಲ್ಲಿ ಮಹಿಳಾ ಸಂರಕ್ಷಣಾಧಿಕಾರಿಗಳಿಗೆ ಅಧಿಕಾರ ನೀಡಿದ್ದಲ್ಲಿ ಅವರ ಹಂತದಲ್ಲಿಯೇ ಪ್ರಕರಣಗಳನ್ನು ಬಗೆಹರಿಸಬಹುದು. ಈ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದ ಅವರು, ತಮ್ಮ ವ್ಯಾಪ್ತಿಗೆ ಬರುವ ಪ್ರಕರಣಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಮಹಿಳಾ ಆಯೋಗದ ನೆರವನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದರು.
ಸಾಂತ್ವಾನ ಯೋಜನೆಯಡಿ ನೀಡಲಾಗುವ ಅನುದಾನ ಪರಿಹಾರಗಳ ಮೊತ್ತವನ್ನು ಆರ್‌ಟಿಜಿಎಸ್ ಮೂಲಕ ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ಅವರು, ಶಾಲೆ ಬಿಟ್ಟ ಮಕ್ಕಳಿಗೆ ಕೌಶಲ್ಯ ಆಧಾರಿತ ತರಬೇತಿ ನೀಡಲು ಪ್ರತ್ಯೇಕ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಭೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಇಲಾಖಾ ನಿರ್ದೇಶಕ ಬಿ.ಎಂ.ವಿಜಯಶಂಕರ್ ಉಪಸ್ಥಿತರಿದ್ದರು.