ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ವಹಿಸಿ: ಗಣಾಧೀಶ್
ಸಾಗರ, ಜೂ.20: ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ಜಾಗ್ರತೆ ಅಗತ್ಯ. ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದರಿಂದ ಕಾಯಿಲೆಗಳನ್ನು ದೂರವಿಡಲು ಸಾಧ್ಯವಿದೆ ಎಂದು ನಗರಸಭೆ ಅಧ್ಯಕ್ಷ ಆರ್.ಗಣಾಧೀಶ್ ಹೇಳಿದ್ದಾರೆ.
ಇಲ್ಲಿನ ಮುಖ್ಯ ಬಸ್ ನಿಲ್ದಾಣದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಆಂದೋಲನಾ ಸಪ್ತಾಹವನ್ನು ಸಾರ್ವಜನಿಕರಿಗೆ ಕರಪತ್ರ ವಿತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನೈರ್ಮಲ್ಯದ ಕೊರತೆಯಿಂದ ಸಾಂಕ್ರಾಮಿಕ ರೋಗಗಳಾದ ಡೆಂಗ್, ಮಲೇರಿಯಾ, ಚಿಕುನ್‌ಗುನ್ಯಾ, ಕರುಳುಬೆನೆ, ವಾಂತಿಭೇದಿ ಹರಡುತ್ತದೆ. ರೋಗ ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸಬೇಕು. ತಮ್ಮ ಮನೆ, ಅಂಗಡಿ ಸುತ್ತಮುತ್ತಲ ಪ್ರದೇಶದಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಶ್ರೀನಾಥ್ ಮಾತನಾಡಿ, ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕುರಿತು ಅರಿವು ಮೂಡಿಸಲಾಗಿದೆ. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ಬಿಸಿನೀರನ್ನು ಕೊಡುವಂತೆ ಸೂಚನೆ ನೀಡಲಾಗಿದೆ. ಜನರ ಸಹಭಾಗಿತ್ವ ಇಲ್ಲದೆ ಹೋದರೆ ಆಡಳಿತದಿಂದ ಪರಿಸರವನ್ನು ಸ್ವಚ್ಛವಾಗಿ ಇರಿಸಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಲಕ್ಷ್ಮಣ ಸಾಗರ್, ದೇವೇಂದ್ರಪ್ಪ, ನಾಗಪ್ಪ ಬೇಳೂರು, ಆರೋಗ್ಯ ಇಲಾಖೆಯ ಸುರೇಶ್, ಸುವರ್ಣ ನಾಯಕ್, ಯಶೋದಾ ಇನ್ನಿತರರು ಉಪಸ್ಥಿತರಿದ್ದರು.