×
Ad

ಪಶ್ಚಿಮವಾಹಿನಿ ಯೋಜನೆಗೆ ಆದ್ಯತೆ: ಸಚಿವ ಪ್ರಮೋದ್

Update: 2016-06-25 23:42 IST

ಉಡುಪಿ, ಜೂ.25: ಜೂ.27 ಮತ್ತು 28ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರು ಸಚಿವರ ಉಪಸ್ಥಿತಿಯಲ್ಲಿ ನಡೆಸಲಿರುವ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಸಿಇಒಗಳ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಜಿಲ್ಲೆಯಲ್ಲಿ ಹರಿಯುವ ನದಿಗಳಿಗೆ ಸರಣಿ ಕಿಂಡಿ ಅಣೆಕಟ್ಟನ್ನು ನಿರ್ಮಿಸುವ ಪಶ್ಚಿಮವಾಹಿನಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಿ ಬೇಡಿಕೆ ಮಂಡಿಸಲಾಗುವುದು ಎಂದು ಮೀನುಗಾರಿಕೆ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಪಶ್ಚಿಮ ವಾಹಿನಿ ಯೋಜನೆಯ ಅನುಷ್ಠಾನದಿಂದ ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಕರೆದ ಸಭೆಯಲ್ಲಿ ಜಿಲ್ಲೆಯ ಪರವಾಗಿ ಎತ್ತಬೇಕಾದ ವಿಷಯಗಳ ಕುರಿತು ಎಲ್ಲಾ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿದ್ದಾಗಿ ಅವರು ತಿಳಿಸಿದರು.

ಕುಂದಾಪುರ, ಉಡುಪಿ, ಮಂಗಳೂರು ಮತ್ತು ಪುತ್ತೂರಿನಲ್ಲಿ ಅನುಷ್ಠಾನಗೊಳ್ಳಬೇಕಾಗಿರುವ ಕುಡ್ಸೆಂಪ್ ಯೋಜನೆಯ ಎರಡನೆ ಹಂತದ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು. ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ವಿವಿಧ ಕಾಮಗಾರಿಗಳಿಗೆ ಸರಕಾರ 40 ಕೋಟಿ ರೂ. ನೀಡಿದರೆ, ಗುತ್ತಿಗೆದಾರರಿಗೆ ನೀಡಬೇಕಾಗಿರುವ ಬಾಕಿಯನ್ನು ತೀರಿಸಿ ಮುಂದಿನ ಕಾಮಗಾರಿಗೆ ಅನುಕೂಲವಾಗಲಿದೆ. ಇದನ್ನು ಸಹ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು.
 

ಜು.2ಕ್ಕೆ ರಸ್ತೆ ಸುರಕ್ಷತಾ ಸಭೆ
 ತ್ರಾಸಿ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಕ್ಕಳು ಮೃತಪಟ್ಟ ಹಿನ್ನೆಲೆಯಲ್ಲಿ ಜು.2ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ರಜತಾದ್ರಿಯಲ್ಲಿರುವ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ಸಭೆಯೊಂದನ್ನು ಕರೆಯಲಾಗಿದೆ. ಇದರಲ್ಲಿ ಶಾಲಾ ಮಕ್ಕಳ ಸುರಕ್ಷಿತ ಸಾಗಾಟ, ಸುವ್ಯವಸ್ಥಿತ ಸಾಗಾಟದ ಬಗ್ಗೆ ಚರ್ಚಿಸಲಾಗುವುದು ಎಂದರು.

ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯಸ್ಥರು, ಮಕ್ಕಳ ಹೆತ್ತವರು, ಮಕ್ಕಳನ್ನು ಕರೆದೊಯ್ಯುವ ರಿಕ್ಷಾ, ವ್ಯಾನ್ ಸೇರಿದಂತೆ ವಿವಿಧ ವಾಹನಗಳ ಚಾಲಕರು, ಮಾಲಕರು ಹಾಗೂ ಆಸಕ್ತ ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಇದರಲ್ಲಿ ಸುಪ್ರೀಂಕೋರ್ಟ್‌ನ ಆದೇಶದ ಬಗ್ಗೆ, ನಿರ್ಬಂಧ ವಿಧಿಸುವುದರ ಪರ-ವಿರೋಧದಲ್ಲಿ ಮಾತನಾಡಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಾಗೂ ಕಾರ್ಯಯೋಜನೆಯೊಂದನ್ನು ರೂಪಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಮೋದ್ ನುಡಿದರು.

ಆರ್‌ಟಿಇ ಸೀಟು
ಜಿಲ್ಲೆಯಲ್ಲಿ ಶೇ.55ರಷ್ಟು ಆರ್‌ಟಿಇ ಸೀಟು ಖಾಲಿ ಇರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಖಾಲಿ ಸೀಟು ತುಂಬಲು ಜಿಲ್ಲಾಮಟ್ಟದಲ್ಲೇ ಅವಕಾಶ ನೀಡುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಅವರು ಮುಂದಿನ ಸೋಮವಾರ (ಜೂ.27) ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್., ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News