ಬಿಜೆಪಿಯಲ್ಲಿ ಯಡಿಯೂರಪ್ಪ ವಿರುದ್ಧ ಬಂಡಾಯ

Update: 2016-06-28 07:56 GMT

ಬೆಂಗಳೂರು, ಜೂ.28: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯ ಜಿಲ್ಲಾ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದಂತೆ ಬಿಜೆಪಿಗೂ ಬಂಡಾಯದ ಬಿಸಿ ತಟ್ಟಿದೆ. ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಮೂಲ ಬಿಜೆಪಿಗರು ಮಂಗಳವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಬಿಜೆಪಿ ಜಿಲ್ಲಾ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸಿದ ಬಳಿಕ ಆಗಿರುವ ಬೆಳವಣಿಗೆಗಳ ಬಗ್ಗೆ ಸಂಘ ಪರಿವಾರದ ಮುಖಂಡರ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಅಶ್ವತ್ಥನಾರಾಯಣ್ ಹೇಳಿದ್ದಾರೆ.

ಪಕ್ಷದ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಮಾರ್ಗದರ್ಶನದಲ್ಲಿ ಸಭೆ ನಡೆಯುತ್ತಿದ್ದು, ಕೆಜೆಪಿಯಿಂದ ವಲಸೆ ಬಂದಿರುವವರಿಗೆ ಎಲ್ಲೆಲ್ಲಿ, ಎಷ್ಟರ ಮಟ್ಟಿಗೆ ಅವಕಾಶ ಕಲ್ಪಿಸಲಾಗಿದೆ? ಮೂಲ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೇಗೆ ಅನ್ಯಾಯವಾಗಿದೆ ಎಂಬುದರ ಬಗ್ಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮುಖಂಡರು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News