×
Ad

ಅರಣ್ಯ ಇಲಾಖೆಯ ವಿರುದ್ಧ ಕೇಸ್ ದಾಖಲಿಸಲು ಪೊಲೀಸ್ ಇಲಾಖೆಗೆ ಸಚಿವರ ಸೂಚನೆ!

Update: 2016-06-30 23:15 IST

ಶಿವಮೊಗ್ಗ, ಜೂ.30: ಅರಣ್ಯ ಹಕ್ಕು ಕಾಯ್ದೆಯಡಿ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ಬಗರ್‌ಹುಕುಂ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆಗೆ ಅವಕಾಶವಿಲ್ಲ. ಒಂದು ವೇಳೆ ಈ ರೈತರನ್ನು ಒಕ್ಕಲೆಬ್ಬಿಸಲು ಮುಂದಾದರೆ ಸಂಬಂಧಿಸಿದ ಅರಣ್ಯ ಇಲಾಖೆಯ ವಿರುದ್ಧ ಕೇಸ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ್ದಾರೆ. ಗುರುವಾರ ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅರಣ್ಯ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಗರ್‌ಹುಕುಂ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದರು. ಈ ರೀತಿಯ ಘಟನೆಗಳು ನಡೆದಿದ್ದರೆ ರೈತರು ಪೊಲೀಸರಿಗೆ ದೂರು ನೀಡಬೇಕು. ಪೊಲೀಸರು ಸಂಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ ವಿರುದ್ಧ ಕೇಸ್ ದಾಖಲಿಸಬೇಕು. ಈ ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ನಡೆದುಕೊಳ್ಳಬೇಕು ಎಂದು ಸಭೆಯಲ್ಲಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚೆನ್ನಣ್ಣನವರ್‌ಗೆ ಹೇಳಿದರು. ತರಾಟೆ: ಹುಚ್ಚುಮಂಗಿ ರೀತಿಯಲ್ಲಿ ಕೆಲಸ ಮಾಡಲು ಹೋಗಬೇಡಿ. ಪ್ರತಿಯೊಂದಕ್ಕೂ ಸುಪ್ರೀಂಕೋರ್ಟ್ ಆದೇಶ ಮುಂದಿಡಬೇಡಿ. ಸರಿಯಾಗಿ ಕೆಲಸ ಮಾಡಿ ಎಂದು ಇದೇ ಸಂದಭರ್ದಲ್ಲಿ ಅಧಿಕಾರಿಗಳ ವಿರುದ್ಧ್ದ ಸಚಿವರು ಹರಿಹಾಯ್ದರು. ಕೆಲಸ ಮಾಡಿ:

ಬಗರ್‌ಹುಕುಂ ಸಾಗುವಳಿ ಸಕ್ರಮ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತದ ವತಿಯಿಂದ ತರಬೇತಿ ಕಾರ್ಯಾಗಾರ ನಡೆಸಿ ಮಾಹಿತಿ ನೀಡಲಾಗಿದೆ. ಹಲವು ಬಾರಿ ತಿಳುವಳಿಕೆ ನೀಡಲಾಗಿದೆ. ಆದಾಗ್ಯೂ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳ ಸಮರ್ಪಕ ವಿಲೇವಾರಿಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಾಯ್ದೆಯಡಿ ಅರ್ಜಿಗಳ ತ್ವರಿತಗತಿಯ ವಿಲೇವಾರಿಗೆ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಸುಮ್ಮನಿರುವುದಿಲ್ಲ. ಅರ್ಜಿಗಳ ತ್ವರಿತಗತಿಯ ವಿಲೇವಾರಿಗೆ ಕ್ರಮಕೈಗೊಳ್ಳಿ. ಇಲ್ಲದಿದ್ದರೆ ಶಿಸ್ತುಕ್ರಮ ಜರಗಿಸುವುದರ ಜೊತೆಗೆ ಹೋರಾಟ ರೂಪಕ್ಕಿಳಿಯುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದ ಅವರು, ಜಿಲ್ಲೆಯಲ್ಲಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಶಾಸಕರು, ಜಿಪಂ, ತಾಪಂ ಸದಸ್ಯರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಸಭೆೆಯಲ್ಲಿ ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ರವಿ ಡಿ. ಚೆನ್ನಣ್ಣನವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News