×
Ad

ನಾಯಕತ್ವ ಬದಲಾವಣೆ ನನ್ನ ಬೇಡಿಕೆಯಲ್ಲ: ಖಮರುಲ್ ಇಸ್ಲಾಮ್

Update: 2016-06-30 23:40 IST

ಬೆಂಗಳೂರು, ಜೂ.30: ರಾಜ್ಯ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಹಿಂದುಳಿದಿರುವ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಮಾಜಿ ಸಚಿವ ಡಾ.ಖಮರುಲ್ ಇಸ್ಲಾಮ್ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿನ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 16 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ತಾನು ಸಲ್ಲಿಸಿರುವ ಸೇವೆ ಹೈಕಮಾಂಡ್‌ಗೂ ಗೊತ್ತಿದೆ. ಎಸ್.ಎಂ.ಕೃಷ್ಣ ಹಾಗೂ ಸಿದ್ದರಾಮಯ್ಯ ಸರಕಾರದಲ್ಲಿ ನನಗೆ ನೀಡಿದ್ದ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮೂವರು ಮುಸ್ಲಿಮರಿಗೆ ಪ್ರಾತಿನಿಧ್ಯ ಸಿಕ್ಕಿದೆ. ಆದರೆ, ಶೇ.80ರಷ್ಟು ಅಲ್ಪಸಂಖ್ಯಾತರು ವಾಸಿಸುತ್ತಿರುವ ಹೈದ್ರಾಬಾದ್- ಕರ್ನಾಟಕ ಭಾಗಕ್ಕೆ ಮಾತ್ರ ಅವಕಾಶ ಇಲ್ಲದಿರುವುದು ಅಲ್ಲಿನ ಜನತೆಯಲ್ಲಿ ತಳಮಳ ಉಂಟು ಮಾಡಿದೆ ಎಂದು ಅವರು ಹೇಳಿದರು.
 ಹೈದ್ರಾಬಾದ್-ಕರ್ನಾಟಕ ಭಾಗದ ಜನರ ಮನಸ್ಸಿನ ಭಾವನೆಗಳನ್ನು ಮುಖ್ಯಮಂತ್ರಿ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇನೆ. ಪ್ರಾದೇಶಿಕವಾಗಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಪಕ್ಷ ಹಾಗೂ ಸರಕಾರ ಗಂಭೀರವಾಗಿ ಚಿಂತನೆ ನಡೆಸಲಿದೆ ಎಂಬ ಭರವಸೆ ಸಿಕ್ಕಿದೆ ಎಂದು ಖಮರುಲ್ ಇಸ್ಲಾಮ್ ತಿಳಿಸಿದರು.
2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಭಾಗದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಾದರೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಪಕ್ಷಕ್ಕೆ ಭಾರಿ ಹಿನ್ನಡೆಯಾಗುತ್ತದೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ, ಎಐಸಿಸಿ ಕಾರ್ಯದರ್ಶಿ ಡಾ.ಚೆಲ್ಲಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ನನ್ನ ಜೊತೆ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದರು. ಅಲ್ಲದೆ, ಹಿರಿಯ ನಾಯಕರಾದ ಅಹ್ಮದ್‌ಪಟೇಲ್, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡಿಸ್ ಸೇರಿದಂತೆ ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News