×
Ad

ಅಸಂಘಟಿತ ಕಾರ್ಮಿಕರಿಗೆ ‘ಸ್ಮಾರ್ಟ್‌ಕಾರ್ಡ್’: ಸಚಿವ ಲಾಡ್

Update: 2016-07-04 19:58 IST

ಬೆಂಗಳೂರು, ಜು. 4: ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ‘ಸ್ಮಾರ್ಟ್‌ಕಾರ್ಡ್’ ನೀಡಲು ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಪರಿಶೀಲಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಕೆ.ಗೋಪಾಲಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲು 40 ಕೋಟಿ ರೂ.ಹಣವನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.

ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸಿದ್ದು, ಅ ಮಂಡಳಿ ಮೂಲಕವೇ ವಸತಿ ಸಮುಚ್ಛಯ, ನಿರ್ಮಾಣ ಹಂತದ ಕಟ್ಟಡಗಳ ಬಳಿಗೆ ಇಲಾಖೆ ಅಧಿಕಾರಿಗಳು ತೆರಳಿ ಅಲ್ಲೇ ಕಾರ್ಮಿಕರನ್ನು ಗುರುತಿಸಿ ನೋಂದಾಯಿಸಿ, ಅವರಿಗೆ ‘ಸ್ಮಾರ್ಟ್ ಕಾರ್ಡ್’ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕೆ.ಗೋಪಾಲಯ್ಯ, ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಮಿಕರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಈ ಬಗ್ಗೆ ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News