×
Ad

ಅವೈಜ್ಞ್ಞಾನಿಕ ಸುತ್ತೋಲೆಯನ್ನು ಹಿಂಪಡೆಯಲು ಒತ್ತಾಯ

Update: 2016-07-12 22:15 IST

ಸಾಗರ,ಜು.12: ರಾಜ್ಯ ಸರಕಾರವು ಜು. 2ರಂದು ಹೊರಡಿಸಿದ ಸುತ್ತೋಲೆ ಶಿಕ್ಷಕ ವಲಯದ ಆತಂಕಕ್ಕೆ ಕಾರಣವಾಗಿದೆ ಎಂದು ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಡಿ.ಗಣತಪ್ಪತಿಳಿಸಿದ್ದಾರೆ. ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸರಕಾರ ಹೊರಡಿಸಿರುವ ಅವೈಜ್ಞ್ಞಾನಿಕ ಸುತ್ತೋಲೆಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮಕ್ಕಳ ಸಂಖ್ಯೆ 60ಕ್ಕಿಂತ ಕಡಿಮೆ ಇರುವ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಭಡ್ತಿ ಮುಖ್ಯ ಶಿಕ್ಷಕರನ್ನು ಹಾಗೂ ಮಕ್ಕಳ ಸಂಖ್ಯೆ 10ಕ್ಕಿಂತ ಕಡಿಮೆ ಇರುವ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎರಡಕ್ಕಿಂತ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಒಬ್ಬ ಶಿಕ್ಷಕರನ್ನು ಹೆಚ್ಚುವರಿ ಎಂದು ಪರಿಗಣಿಸುವಂತೆ ಪ್ರಸ್ತಾಪಿಸಿರುವುದು ಅವೈಜ್ಞಾನಿಕ ಚಿಂತನೆಯಾಗಿದೆ ಎಂದು ದೂರಿದರು. ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಇಲ್ಲದೆ ಹೋದರೆ ಆಡಳಿತ ನಿರ್ವಹಣೆ ಕಷ್ಟಸಾಧ್ಯವಾಗುತ್ತದೆ. ಸರಕಾರದ ಬಿಸಿಯೂಟ ಯೋಜನೆ ಸೇರಿದಂತೆ ಯಾವ ಯೋಜನೆಯನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಆಗುವುದಿಲ್ಲ. ಶಿಕ್ಷಕರ ಸಂಖ್ಯೆ ಕಡಿಮೆ ಆಗುವುದರಿಂದ ಇರುವ ಶಿಕ್ಷಕರ ಮೇಲೆ ಒತ್ತಡ ಹೆಚ್ಚುತ್ತದೆ. ಈಗಾಗಲೇ ಜೂನ್ ತಿಂಗಳಲ್ಲಿ ಒಂದು ಸುತ್ತಿನ ವರ್ಗಾವಣೆ ಪ್ರಕ್ರಿಯೆ ಮುಗಿದಿದೆ. ಈಗ ಪುನಃ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಿಂದ ಭಡ್ತಿ ಮುಖ್ಯ ಶಿಕ್ಷಕರನ್ನು ಹಾಗೂ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲು ಮುಂದಾಗಿರುವ ಕ್ರಮವನ್ನು ಸರಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದರು. ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪ ಓ.ಕೆ. ಮಾತನಾಡಿ, ಲೀನ್ ಶಿಫ್ಟ್ ಹೆಸರಿನಲ್ಲಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸುವ ಪ್ರಕ್ರಿಯೆಯನ್ನು ರಾಜ್ಯ ಸರಕಾರ ತಕ್ಷಣ ನಿಲ್ಲಿಸಬೇಕು. ಕಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಯನ್ನೇ ತೆಗೆದು ಹಾಕುವುದು ಸರಿಯಾದ ಕ್ರಮವಲ್ಲ. ಇಂತಹ ಅವೈಜ್ಞಾನಿಕ ನಿರ್ಧಾರದಿಂದ ಶೈಕ್ಷಣಿಕ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು. ಈ ಸುತ್ತೋಲೆಯ ಹಿಂದೆ ಸರಕಾರಿ ಶಾಲೆಯನ್ನು ಹಂತಹಂತವಾಗಿ ಮುಚ್ಚುವ ವ್ಯವಸ್ಥಿತ ಹುನ್ನಾರವಿದೆ. ಈಗಾಗಲೇ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಇದರ ಜೊತೆಗೆ ಶಿಕ್ಷಕರ ಸಂಖ್ಯೆಯನ್ನು ಸರಕಾರವೇ ಕಡಿಮೆ ಮಾಡಿದರೆ ಶಾಲೆ ನಡೆಸುವುದು ಕಷ್ಟವಾಗುತ್ತದೆ. ಸರಕಾರ ಸುತ್ತೋಲೆಯನ್ನು ಹಿಂದಕ್ಕೆ ಪಡೆಯದೆ ಹೋದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮೂರ್ತಿ ಎಂ.ವೈ., ಭಡ್ತಿ ಮುಖ್ಯ ಶಿಕ್ಷಕರ ಸಂಘದ ದೇವೇಂದ್ರ ನಾಯ್ಕ, ನೂರ್‌ಅಹ್ಮದ್, ಹಾಲಸ್ವಾಮಿ, ಬೂದ್ಯಪ್ಪ, ಶ್ರೀದೇವಿ ಮೋಹನ್, ಡಿ.ಕೆ.ಮೋಳೆ, ಶಾರದಾ, ಆಯಿಷಾಬಾನು, ಲಲಿತಾ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News