ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಅಧಿಕಾರಿಗಳಿಂದ ಉನ್ನತ ಮಟ್ಟದ ಸಭೆ
ಶಿವಮೊಗ್ಗ, ಜು. 16: ಜಿಲ್ಲೆಯ ಪಶ್ಚಿಮಘಟ್ಟ ಹಾಗೂ ಅಭಯಾರಣ್ಯ ವ್ಯಾಪ್ತಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಸುವುದಕ್ಕೆ ಅನುಮತಿ ನೀಡುವುದಕ್ಕೂ ಮುನ್ನ ಸಕ್ಷಮ ಪ್ರಾಧಿಕಾರಿಗಳ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆ ನಡೆಸುವುದಕ್ಕೆ ಸಂಬಂಧಿಸಿದಂತೆ 10 ಹಾಗೂ ಅಭಯಾರಣ್ಯ ವ್ಯಾಪ್ತಿಯ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸುವುದರ ಕುರಿತಾಗಿ 20 ಅರ್ಜಿಗಳು ಜಿಲ್ಲಾಡಳಿತದ ಮುಂದಿವೆ. ಈ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ನೀಡುವ ಬಗ್ಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಹಾಗೂ ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಪ್ರಾಧಿಕಾರದ ಅಭಿಪ್ರಾಯದಂತೆ ಸೂಕ್ತ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕ್ರಮಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ ಅವರು ಮಾತನಾಡಿ, ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಅರ್ಜಿಗಳನ್ನು ಕಾನೂನಿನ ಅಡಿ ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡಬಾರದು. ಅನುಮತಿ ನೀಡುವ ಮುನ್ನ ಪರಿಸರ ಹಾಗೂ ಸಂಬಂಧಿಸಿದ ಇಲಾಖೆಗಳ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್ ಮಾತನಾಡಿ, ಕಲ್ಲು ಗಣಿಗಳ ಮೇಲೆ ದಾಳಿ ನಡೆಸುವ ಮುನ್ನ ಪೊಲೀಸ್ ಭದ್ರತೆಯೊಂದಿಗೆ ತೆರಳಬೇಕು. ಇದರಿಂದ ಸಂಭಾವ್ಯ ಅನಾಹುತಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಕ್ರಮ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಸುಬಾಷ್ ಪಟ್ಟಣ ಶೆಟ್ಟಿಯವರು ಮಾತನಾಡಿ, ಕಲ್ಲು ಗಣಿಗಾರಿಕೆ ನವೀಕರಣ ಹಾಗೂ ಹೊಸದಾಗಿ ಆರಂಭಕ್ಕೆ ಕೋರಿ ಬಂದಿರುವ ಅರ್ಜಿಗಳನ್ನು ಕಾನೂನು ರೀತಿಯಲ್ಲಿ ವಿಲೇವಾರಿಗೊಳಿಸಲಾಗುತ್ತಿದೆ ಎಂದು ಸಭೆಗೆ ಸವಿವರ ಮಾಹಿತಿ ನೀಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.