ಜಾರ್ಜ್, ಮೊಹಂತಿ, ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲು
ಮಡಿಕೇರಿ ಜು.19: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ವಿರುದ್ಧ ಮಡಿಕೇರಿ ನಗರ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಡಿವೈಎಸ್ಪಿ ಗಣಪತಿ ಅವರ ಪುತ್ರ ನೇಹಾಲ್ ಗಣಪತಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆೆ ನಡೆಸಿದ ಜೆಎಂಎಫ್‌ಸಿ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲು ಸೋಮವಾರ ಆದೇಶ ನೀಡಿದ್ದರು. ಈ ಆದೇಶದನ್ವಯ ಕಾರ್ಯ ಪ್ರವೃತ್ತರಾದ ಪೊಲೀಸರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸೆಕ್ಷನ್ 156 ಸಬ್ ಸೆಕ್ಷನ್ 3ರ ಅನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 306ರಂತೆ ನಗರ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ ದಾಖಲಾಗಿದ್ದು, ಎಫ್‌ಐಆರ್ 89/2016 ರಡಿ ಠಾಣಾಧಿಕಾರಿ ಭರತ್ ಅವರು ತನಿಖಾಧಿಕಾರಿಯಾಗಿ ತನಿಖೆ ನಡೆಸಲಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ನಗರ ಠಾಣೆಯ ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ ನ್ಯಾಯಾಲಯದ ಆದೇಶದಂತೆ ಮಾಜಿ ಸಚಿವರು ಹಾಗೂ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿಂದ ಕಾನೂನು ಸಲಹೆ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದ್ದ ಕಾರಣ ಎಫ್‌ಐಆರ್ ದಾಖಲಿಸಿಕೊಳ್ಳಲು ತಡವಾಯಿತು ಎಂದು ಸ್ಪಷ್ಟಪಡಿಸಿದರು.