×
Ad

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಸರಕಾರ, ಗಣಪತಿ ಪುತ್ರ ನೇಹಾಲ್‌ಗೆ ಹೈಕೋರ್ಟ್ ನೋಟಿಸ್

Update: 2016-07-19 20:28 IST

ಬೆಂಗಳೂರು, ಜು.19: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಸರಕಾರ ಮತ್ತು ಗಣಪತಿ ಪುತ್ರ ನೇಹಾಲ್‌ಗೆ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೀಳ್ಳಪ್ಪ ಅವರಿದ್ದ ನ್ಯಾಯಪೀಠ. ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಮೊದಲು ಸರಕಾರದ ಅನುಮತಿಯನ್ನು ಪಡೆಯಬೇಕು ಹಾಗೂ ಈಗಾಗಲೇ ಸರಕಾರ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದೆ. ಆದರೆ, ವಕೀಲರು ಈ ಯಾವ ಅಂಶಗಳನ್ನೂ ಮಡಿಕೇರಿ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಗಮನಕ್ಕೆ ತರದ ಹಿನ್ನೆಲೆಯಲ್ಲಿ ಮಡಿಕೇರಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಈ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ನೀಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರ ಯಾವುದೇ ಪಾತ್ರವಿಲ್ಲ. ಹೀಗಾಗಿ, ಈ ಎಫ್‌ಐಆರ್ ಅನ್ನು ರದ್ದುಪಡಿಸಬೇಕೆಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು ಸರಕಾರ ಮತ್ತು ಗಣಪತಿ ಪುತ್ರ ನೇಹಾಲ್‌ಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ಹಿನ್ನೆಲೆ: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮಡಿಕೇರಿ ನಗರದ ಜೆಎಂಎಫ್‌ಸಿ ನ್ಯಾಯಾಧೀಶೆ ಅನ್ನಪೂರ್ಣೆಶ್ವರಿ ಅವರು 156 ಸಬ್ ಸೆಕ್ಷನ್ 3ರ ಅನ್ವಯ ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮಡಿಕೇರಿ ನಗರ ಠಾಣೆಗೆ ಸ್ಪಷ್ಟ ನಿರ್ದೇಶನ ನೀಡಿತ್ತು. ಹೀಗಾಗಿ, ಈ ಆದೇಶವನ್ನು ಪ್ರಶ್ನಿಸಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News