×
Ad

ಉನ್ನತ ಶಿಕ್ಷಣದ ಮೂಲಕ ಸಮಾಜಕೆ ಕೊಡುಗೆ ನೀಡಿ

Update: 2016-07-20 21:43 IST

ಮಡಿಕೇರಿ,ಜು.20: ಉನ್ನತ ಶಿಕ್ಷಣ ಪಡೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದರೊಂದಿಗೆ ಸಮಾಜಕ್ಕೂ ಉತ್ತಮ, ಕೊಡುಗೆಯನ್ನು ನೀಡುವ ಗುರಿ ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕೆ.ಎಂ.ಲೋಕೇಶ್ ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ನೋಡ ಬನ್ನಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಯುದ್ಧ ತಂತ್ರಗಳಿಂದ ಈ ವಿಶ್ವವನ್ನು ಗೆಲ್ಲಲು ಸಾಧ್ಯವಾಗದಿರಬಹುದು, ಆದರೆ ವಿದ್ಯೆೆ ಎಂಬ ಅಸ್ತ್ರದಿಂದ ಗೆಲ್ಲಲು ಸಾಧ್ಯವಿದೆ. ಆದ್ದರಿಂದ ಪ್ರತಿಯೊಬ್ಬರು ಉನ್ನತ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು ಎಂದು ಹೇಳಿದರು.

ಓಪನ್ ಹೌಸ್ ಕಾರ್ಯಕ್ರಮದಲ್ಲಿ ಕೋರ್ಸ್‌ಗಳ ಬಗ್ಗೆ ಇರುವ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿ ಹೇಳಲಾಗುತ್ತದೆ. ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ವಿದ್ಯಾರ್ಥಿಗಳು ಅದನ್ನು ಸಂಬಂಧಿಸಿದ ವಿಭಾಗದ ಮುಖ್ಯಸ್ಥರ ಬಳಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಜಿ.ರಾಜೇಂದ್ರ, ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತಿವೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದಲ್ಲಿ ಜಿಲ್ಲೆ ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಲೇಜು ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳು ಮತ್ತು ಸೌಲಭ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಎಂದರು.

ಕಳೆದ ಬಾರಿ ಮಂಗಳೂರು ವಿವಿಯಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಪ್ಪ ಕಾಲೇಜಿನ ವಿಜ್ಞ್ಞಾನ ವಿಭಾಗದಲ್ಲಿ ಎಂ.ಎಸ್ಸಿ, ಭೌತಶಾಸ್ತ್ರ, ಕಲಾ ವಿಭಾಗದಲ್ಲಿ ಎಂ.ಎ ಇಂಗ್ಲಿಷ್, ಅರ್ಥಶಾಸ್ತ್ರ ಹಾಗೂ ವಾಣಿಜ್ಯ ವಿಭಾಗದಲ್ಲಿ ಎಂಬಿಎ ಟ್ರಾವೆಲ್ ಆ್ಯಂಡ್ ಟೂರಿಸಮ್ ಕೋರ್ಸುಗಳಿವೆ ಎಂದು ಹೇಳಿದರು. ಮುಂದಿನ ಸಾಲಿನಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಆರಂಭಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.

ಪ್ರೊ. ಜಗನ್ನಾಥ್, ಡಾ. ಟಿ.ಡಿ. ತಿಮ್ಮಯ್ಯ, ಡಾ. ನಯನ ಕಶ್ಯಪ್, ಡಾ. ವಿಜಯಲಕ್ಷ್ಮೀ ಹಾಗೂ ಡಾ.ಗಾಯತ್ರಿ ದೇವಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News