ಆರ್‌ಟಿಒ ಜಾಗ ವಶಕ್ಕೆ ಪಡೆಯಲು ಡಿಸಿ ಸೂಚನೆ
ಮಡಿಕೇರಿ, ಜು.21: ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಬಳಿ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್.ಟಿ.ಒ) ಸೇರಿದ ಜಾಗವನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು. ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣದ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು, ಭವನದ ಬಳಿ ಇರುವ ಆರ್‌ಟಿಒ ಕಚೇರಿಗೆ ಸೇರಿದ ವಸತಿ ಗೃಹದ ಜಾಗವನ್ನು ವಶಕ್ಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಬಳಿ ಇರುವ ಆರ್‌ಟಿಓ ಕಚೇರಿಯ ಸಿಬ್ಬಂದಿಯ ವಸತಿ ಗೃಹಗಳನ್ನು ತೆರವುಗೊಳಿಸುವಂತಾಗಲು ಅಲ್ಲಿನ ಸಿಬ್ಬಂದಿಯ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಅವರು ಸಲಹೆ ಮಾಡಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಹುಟ್ಟುಹಬ್ಬದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಲಹೆ ನೀಡಿದರು. ಇದಕ್ಕೆ ಮಾಹಿತಿ ನೀಡಿದ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಸಚಿನ್, ಮುಂದಿನ ಮಾರ್ಚ್ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು,
ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಜಾಧವ್, ಎರಡು ಮೂರು ತಿಂಗಳಲ್ಲಿ ವಸತಿ ಗೃಹಗಳ ವ್ಯವಸ್ಥೆ ಮಾಡಲಾಗುವುದು ಎಂದರು. ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಮೇಜರ್ ಬಿ.ಎ. ನಂಜಪ್ಪ, ಉಳ್ಳಿಯಡ ಎಂ.ಪೂವಯ್ಯ, ಟಿ.ಎಂ. ಸೋಮಯ್ಯ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ಕುರಿತು ಹಲವು ಸಲಹೆ ನೀಡಿದರು. ಮಣಜೂರು ಮಂಜುನಾಥ್, ರಾಘವೇಂದ್ರ, ಕಾರ್ಯಪ್ಪಮತ್ತಿತರರು ಉಪಸ್ಥಿತರಿದ್ದರು.