ನಿಯಮ ಉಲ್ಲಂಘಿಸುವ ವಾಹನಗಳ ಫೋಟೊ ಕಳುಹಿಸಿದರೆ ಕ್ರಮ: ಎಸ್ಪಿ
Update: 2016-07-22 23:39 IST
ಉಡುಪಿ, ಜು.22: ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಮತ್ತು ಇತರ ವಾಹನಗಳ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ಅಂತಹ ವಾಹನದ ನಂಬರ್‌ನೊಂದಿಗೆ ಪೋಟೊ ತೆಗೆದು ವಾಟ್ಸ್ ಆ್ಯಪ್ ಸಂಖ್ಯೆ 9480805400ಗೆ ಕಳುಹಿಸಿದಲ್ಲಿ ಅಂತಹ ಚಾಲಕರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಇತರೆ ಘನ ವಾಹನಗಳ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಳಲ್ಲಿ ವಾಹನ ಚಲಾಯಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಹಳಷ್ಟು ದೂರುಗಳು ಬಂದಿದೆ. ಇದರಿಂದ ಅಪಘಾತಗಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.