ಎಸ್ಮಾ ಜಾರಿಗೆ ಬಲವಂತ ಮಾಡಲಾಗದು: ಹೈಕೋರ್ಟ್

Update: 2016-07-25 18:57 GMT

 ಬೆಂಗಳೂರು, ಜು.25: ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ನೌಕರರ ವಿರುದ್ಧ ಎಸ್ಮಾ ಜಾರಿ ಮಾಡುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಅಭಿಪ್ರಾಯಪಟ್ಟಿದೆ.

      ಈ ಸಂಬಂಧ ಚನ್ನಸಂದ್ರದ ಆರ್.ವಾಸುದೇವನ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಸರಕಾರ ಎಸ್ಮಾ ಜಾರಿ ಮಾಡಬೇಕು ಅದು ಮಾಡುತ್ತಿಲ್ಲ, ನಾವು ಎಸ್ಮಾ ಜಾರಿ ಮಾಡಲು ಬಲವಂತ ಮಾಡಲೂ ಬರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಂಗಳವಾರ ದೊಳಗೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ಎಂದು ಸೂಚಿಸಿದೆ.
   
  ಅರ್ಜಿದಾರರ ಪರ ವಾದಿಸಿದ ವಕೀಲರು, ಮುಷ್ಕರ ದಿಂದಾಗಿ ರಾಜ್ಯಾದ್ಯಂತ ಪ್ರಯಾಣಿಕರು ಪರದಾಡುತ್ತಿದ್ದು, ಖಾಸಗಿ ವಾಹನಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ. ಜೊತೆಗೆ ಸಾರಿಗೆ ಸಂಸ್ಥೆಯ ಹಲವು ಬಸ್‌ಗಳು ಹಾನಿಗೊಂಡಿವೆ. ಹೀಗಾಗಿ, ಮುಷ್ಕರನಿರತರ ವಿರುದ್ಧ ಎಸ್ಮಾ ಜಾರಿ ಮಾಡಲು ಸರಕಾರಕ್ಕೆ ನಿರ್ದೇಶಿಸಬೇಕೆಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು, ಎಸ್ಮಾ ಜಾರಿ ಮಾಡುವುದು ಸರಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ಅಭಿಪ್ರಾಯಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News