ಬಿ.ಸಿ.ರೋಡ್: ಬೆಲೆ ಏರಿಕೆ, ಕೇಂದ್ರ ಸರಕಾರದ ನೀತಿ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2016-07-26 09:54 GMT

ಬಂಟ್ವಾಳ, ಜು. 26: ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ಆಡಳಿತ ವಿರೋಧಿ ನೀತಿಯ ವಿರುದ್ಧ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಆಡಳಿತಕ್ಕೆ ಬಂದ ಮೇಲೆ ದಿನಬಳಕೆಯ ಆಹಾರ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ಬಡವರು ಸಾಕಷ್ಟು ತೊಂದರೆ ಆನುಭವಿಸುವಂತಾಗಿದೆ. ಜೊತೆಗೆ ಆರ್ಥಿಕತೆಯ ಬೆನ್ನೆಲುಬಾದ ಅಡಿಕೆ, ರಬ್ಬರ್ ಮತ್ತು ತೆಂಗು ಬೆಳೆಯ ಕುಸಿತದಿಂದಾಗಿ ಕೃಷಿಕರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಮುಖವಾದರೂ ದೇಶಿಯ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರುತ್ತಲೇ ಇದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಬದಲು ಕೇಂದ್ರ ಸರಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್. ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭೆ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ತಲಪಾಡಿ, ಪ್ರಮುಖರಾದ ಪರಮೇಶ್ವರ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News