ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ
ಶಿವಮೊಗ್ಗ, ಆ.4: ಮೈಸೂರು ನಗರದ ನ್ಯಾಯಾಲಯ ಕಟ್ಟಡದ ಶೌಚಾಲಯದ ಕೊಠಡಿಯಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟದ ಘಟನೆಯ ನಂತರ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಶೋಧ ಕಾರ್ಯಾಚರಣೆ ಹೆಚ್ಚಿಸಲಾಗಿದೆ. ಶಿವಮೊಗ್ಗ ನಗರದಲ್ಲಿರುವ ಪ್ರಮುಖ ಸರಕಾರಿ ಕಚೇರಿಗಳು, ನ್ಯಾಯಾಲಯ ಕಟ್ಟಡ ಸಂಕೀರ್ಣ, ಜನನಿಬಿಡ ಸ್ಥಳಗಳಲ್ಲಿ ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದವರು ಪ್ರತಿ ನಿತ್ಯ ತಪಾಸಣಾ ಕಾರ್ಯ ನಡೆಸುತ್ತಿರುವುದು ಕಂಡುಬರುತ್ತಿದೆ. ಗುರುವಾರ ಕೂಡ ಈ ತಂಡದ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿ, ನ್ಯಾಯಾಲಯ ಆವರಣ ಸೇರಿದಂತೆ ವಿವಿಧೆಡೆ ತಪಾಸಣಾ ಕಾರ್ಯ ನಡೆಸಿದ್ದು ಕಂಡುಬಂದಿತು. ಮೈಸೂರು ಘಟನೆಯ ನಂತರ ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್ ಮಾತನಾಡಿದರು. ‘ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಈ ಹಿಂದಿನಿಂದಲೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಅನುಸರಣೆ ಮಾಡಿಕೊಂಡು ಬರುತ್ತಿದೆ. ಪ್ರಮುಖ ಸ್ಥಳಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸುತ್ತಿರುತ್ತದೆ. ಹಿರಿಯ ಅಧಿಕಾರಿಗಳಿಂದ ಬರುವ ಮಾಹಿತಿಗೆ ಅನುಗುಣವಾಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.