×
Ad

ರೈತರು ಕೃಷಿಯಲ್ಲಿ ಯಂತ್ರಗಳ ಬಳಕೆಗೆ ಮುಂದಾಗಿ: ಕೃಷಿ ಸಚಿವ ಕೃಷ್ಣ ಭೈರೇಗೌಡ

Update: 2016-08-05 22:03 IST

ಚಿಕ್ಕಮಗಳೂರು, ಆ.5: ಕಾರ್ಮಿಕರ ಕೊರತೆಯಿಂದ ಪಾರಾಗುವ ನಿಟ್ಟಿನಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ಯಂತ್ರೋಪಕರಣಗಳನ್ನು ಬಳಸಲು ಮುಂದಾಗಬೇಕು ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ರೈತರಿಗೆ ಕರೆ ನೀಡಿದ್ದಾರೆ.

 ಇಂದು ಮೂಡಿಗೆರೆ ತಾಲೂಕಿನ ಗೋಣಿಬೀಡಿನಲ್ಲಿ ಜಿಪಂ, ತಾಪಂ ಹಾಗೂ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ರೈತರ ತಾಕಿನಲ್ಲಿ ಭತ್ತದ ಯಾಂತ್ರೀಕೃತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಮಿಕರ ಕೊರತೆ ಇತ್ತೀಚಿನ ವರ್ಷಗಳಲ್ಲಿ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ಇದರ ಜೊತೆಗೆ ಕೂಲಿ ಸಹ ಹೆಚ್ಚಿದೆ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದಿರುವ ರೈತರು ಕೃಷಿ ಚಟುವಟಿಕೆ ಮಾಡಲಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದಿಸಿದರು. ಈ ಹಿನ್ನೆಲೆಯಲ್ಲಿ ಯಂತ್ರೋಪಕರಣಗಳು ಮತ್ತು ಆಧುನಿಕ ತಂತ್ರಜ್ಞಾನವನ್ನು ಕೃಷಿ ಚಟುವಟಿಕೆಗೆ ಬಳಸುವಂತೆ ರೈತರಿಗೆ ಸಲಹೆ ನೀಡಿದ ಅವರು, ಇದರಿಂದಾಗಿ ಕಡಿಮೆ ವೆಚ್ಚದಲ್ಲಿ ಲಾಭದಾಯಕ ಕೃಷಿ ಮಾಡಲು ಸಾಧ್ಯವಾಗುತ್ತದೆ ಎಂದರು. ಕೃಷಿ ಯಂತ್ರಗಳನ್ನು ಎಲ್ಲ ರೈತರು ಖರೀದಿಸಲು ಕಷ್ಟ ಎಂಬ ಕಾರಣಕ್ಕೆ ಪ್ರತೀ ಹೋಬಳಿಯಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಿದ್ದು, ಸುಮಾರು 75 ಲಕ್ಷ ರೂ. ವೌಲ್ಯದ ಕೃಷಿ ಯಂತ್ರಗಳನ್ನು ಆಯಾ ಪ್ರದೇಶಗಳಿಗೆ ಅನುಗುಣವಾಗಿ ಖರೀದಿಸಿ ಬಾಡಿಗೆ ಆದಾರದಲ್ಲಿ ರೈತರಿಗೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 12 ಕೇಂದ್ರಗಳು ಕಾರ್ಯಾರಂಭ ಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 16 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು. ಶಾಸಕ ಬಿ.ಬಿ ನಿಂಗಯ್ಯ ಮಾತನಾಡಿ, ರಾಜ್ಯದಲ್ಲಿರುವ ಬಹುತೇಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಮಧ್ಯವರ್ತಿಗಳ ಹಿಡಿತದಲ್ಲಿವೆ ಇದರಿಂದಾಗಿ ಸಾಲ ಮಾಡಿ ಬೆಳೆ ಬೆಳೆದ ರೈತರು ದಲ್ಲಾಳಿಗಳ ಶೋಷಣೆಯಿಂದಾಗಿ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.

ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಸಚಿವರು, ದಲ್ಲಾಳಿಗಳ ಶೋಷಣೆಯಿಂದ ರೈತರನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಆನ್‌ಲೈನ್ ಮುಖಾಂತರ ಬೆಳೆಗಳನ್ನು ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ತಂದಿದ್ದು, ಈ ವ್ಯವಸ್ಥೆಗೆ ರಾಷ್ಟ್ರ ಮಟ್ಟದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಆನ್‌ಲೈನ್ ಮುಖಾಂತರ ರೈತರು ತಮ್ಮ ಬೆಳೆಯನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರುವುದರ ಜೊತೆಗೆ ಯಾವುದೇ ವಸ್ತುಗಳನ್ನು ಖರೀದಿಸಬಹುದಾಗಿದೆ. ಈ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಕೃಷಿ ಇಲಾಖೆಗೆ ಆಧುನೀಕರಣದ ಸ್ಪರ್ಶ ನೀಡುವುದರ ಜೊತೆಗೆ ಕಾಲಕಾಲಕ್ಕೆ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವ ಕೆಲಸ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಮಾತನಾಡಿ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ವ್ಯವಸ್ಥೆ ಜಾರಿಗೆ ತರಬೇಕೆಂದರು.

ಸಚಿವ ಕೃಷ್ಣ ಭೈರೇಗೌಡ ಅವರು ಪ್ರಾತ್ಯಕ್ಷಿಕೆಯಲ್ಲಿ ಸ್ವತಃ ಪಾಲ್ಗೊಂಡು ಯಂತ್ರ ಚಾಲನೆ ಮಾಡಿ ನಾಟಿ ಮಾಡುವ ಮೂಲಕ ಆಧುನಿಕ ಯಂತ್ರಗಳ ಬಳಕೆ ಬಗ್ಗೆ ರೈತರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷ ರಾಮಸ್ವಾಮಿ, ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಾಮಣ್ಣ ಬಣಕಲ್, ಸದಸ್ಯೆ ಅಮಿತ ಮುತ್ತಪ್ಪ, ತಾಪಂ. ಅಧ್ಯಕ್ಷ ರತನ್, ಉಪಾಧ್ಯಕ್ಷ ಭರತ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಅಶೋಕ, ಮುಖಂಡರಾದ ಸುಂದರ್ ಕುಮಾರ್, ನಾಗೇಶ್, ಕೃಷಿ ಇಲಾಖೆ ಅಧಿಕಾರಿಗಳು, ರೈತ ಬಾಂಧವರು ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News