×
Ad

ದಲಿತರ ಮೇಲಿನ ಹಲ್ಲೆೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Update: 2016-08-06 22:11 IST

ಮಡಿಕೇರಿ, ಆ.6: ಗುಜರಾತ್‌ನಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಹಲ್ಲೆ ಪ್ರಕರಣ ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ ಅವರ ವಿರುದ್ಧ ಬಿಜೆಪಿ ಮುಖಂಡ ಮಾಡಿರುವ ಅವಹೇಳನವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೆೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು, ಸಂಘ ಪರಿವಾರ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಗೋ ಚರ್ಮವನ್ನು ಸುಲಿದ ಕಾರಣಕ್ಕಾಗಿ ಗುಜರಾತ್‌ನಲ್ಲಿ ಮತ್ತು ಗೋಮಾಂಸ ತಿಂದರು ಎನ್ನುವ ನೆಪವೊಡ್ಡಿ ಚಿಕ್ಕಮಗಳೂರಿನಲ್ಲಿ ದಲಿತರ ಮೇಲೆ ಸಂಘ ಪರಿವಾರ ಹಲ್ಲೆ ನಡೆಸಿದ್ದು, ಇದು ಅತ್ಯಂತ ಅಮಾನವೀಯ ಕೃತ್ಯವಾಗಿದೆಯೆಂದು ಅಸಮಾಧಾನ ವ್ಯಕ್ತಪಡಿಸಿದರು.

ಒಬ್ಬರ ಆಹಾರದ ಹಕ್ಕನ್ನು ಕಸಿದುಕೊಳ್ಳುವುದು ಮತ್ತು ದಲಿತರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ಬಿಎಸ್ಪಿ ನಾಯಕಿ ಮಾಯಾವತಿ ಅವರು ದಲಿತ ವರ್ಗದವರೆನ್ನುವ ಕಾರಣಕ್ಕಾಗಿ ಬಿಜೆಪಿ ಮುಖಂಡ ದಯಾ ಶಂಕರ್ ಸಿಂಗ್ ಅವಹೇಳನ ಮಾಡಿದ್ದಾರೆಂದು ಎಸ್‌ಡಿಪಿಐ ಪ್ರಮುಖರು ಆರೋಪಿಸಿದರು.

ಗುಜರಾತ್‌ನಲ್ಲಿ ನಡೆದ ದಲಿತರ ಮೇಲಿನ ಹಲ್ಲೆ ಮತ್ತು ಮಾಯಾವತಿ ಅವರ ವಿರುದ್ಧದ ಅವಹೇಳನ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹ್ಸಿನ್ ಒತ್ತಾಯಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ.ಸುಬ್ಬಯ್ಯ, ಕೇಂದ್ರ ಸರಕಾರದ ಧೋರಣೆಗಳನ್ನು ತೀವ್ರವಾಗಿ ಖಂಡಿಸಿದರು. ಅಲ್ಪಸಂಖ್ಯಾತರಿಗೆ ಮತ್ತು ದಲಿತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಪ್ರತಿಭಟನಾಕಾರರು ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದರು. ಎಸ್‌ಡಿಪಿಐ ಪ್ರಮುಖರಾದ ಅಬೂಬಕರ್, ಮನ್ಸೂರ್ ಅಲಿ, ಕೆ.ಜೆ. ಪೀಟರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News