‘ಸಸ್ಯಕಾಶಿ’ ಶೃಂಗಾರಕ್ಕೆ ಆಧುನಿಕ ತಂತ್ರಜ್ಞಾನನದ ನೆರವು: ಸಚಿವ ಮಲ್ಲಿಕಾರ್ಜುನ್
ಬೆಂಗಳೂರು, ಆ.6: ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಸ್ಯಕಾಶಿ ಲಾಲ್‌ಬಾಗ್ ಹಾಗೂ ಕಬ್ಬನ್ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನಗಳ ಮೂಲಕ ಸಸ್ಯಕಾಶಿ ಲಾಲ್‌ಬಾಗ್, ಕಬ್ಬನ್‌ಪಾರ್ಕ್‌ನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮೂಲಕ ಹೊಸತನ ನೀಡುವ ಆಲೋಚನೆ ಇದೆ ಎಂದರು.
ಹೂವಿನ ಉದ್ಯಾನವನ: ರಾಜ್ಯದ ನಾಲ್ಕು ಕಡೆಗಳಲ್ಲಿ ಕಬ್ಬನ್‌ಪಾರ್ಕ್ ಮತ್ತು ಲಾಲ್‌ಬಾಗ್ ಮಾದರಿಯಲ್ಲಿ ಹೂದೋಟ ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿದೆ. ಈ ಸಂಬಂಧ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಅದನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ಲಾಲ್‌ಬಾಗ್‌ನ ರೂವಾರಿ ಎನ್.ಎಚ್.ಮರಿಗೌಡ ಅವರ ಶ್ರಮದಿಂದಾಗಿ ರಾಜ್ಯದಲ್ಲಿ 15 ಸಾವಿರ ಎಕರೆ ಪ್ರದೇಶದಲ್ಲಿ ‘ತಾಳೆ’ ಬೆಳೆಯಲಾಗುತ್ತಿದೆ. ಇತ್ತೀಚೆಗೆ ತಾಳೆ ಬೀಜದ ಬೆಲೆ ಕಡಿಮೆಯಾಗಿದ್ದು, 7 ಸಾವಿರ ರೂ.ಗಳಿಗೆ ಕುಸಿದಿತ್ತು. ಅದನ್ನು ಸಂಪುಟದಲ್ಲಿ ಚರ್ಚಿಸಿ ಇದೀಗ 9,500 ರೂ.ಗಳಿಗೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ತೋಟಗಾರಿಕಾ ಇಲಾಖೆಯನ್ನು ಅಭಿವೃದ್ಧಿ ದಿಕ್ಕಿನಲ್ಲಿ ಕೊಂಡೊಯ್ಯಲು ಸಾಕಷ್ಟು ಆಲೋಚನೆಗಳಿದ್ದು, ಸಮಯ ಅತ್ಯಂತ ಕಡಿಮೆ ಇದೆ. ಈ ಅವಧಿಯಲ್ಲೆ ಹೆಚ್ಚು ಕೆಲಸ ಮಾಡಲು ಮುಂದಾಗಿದ್ದೇನೆ ಎಂದು ಮಲ್ಲಿಕಾರ್ಜುನ್ ಇದೇ ವೇಳೆ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.