ಮೈಸೂರು ಜಿಲ್ಲಾಧಿಕಾರಿ ಶಿಖಾ ಎತ್ತಂಗಡಿ

Update: 2016-08-10 14:00 GMT

ಬೆಂಗಳೂರು, ಆ.10: ರಾಜ್ಯ ಸರಕಾರವು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಸೇರಿದಂತೆ 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಎಂ.ಬಿ.ಸಾವಿತ್ರಿ ಅವರನ್ನು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ(ಕೆಎಸ್‌ಎಸ್‌ಐಡಿಸಿ)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಎನ್.ಅಜಯ್‌ನಾಗಭೂಷಣ್‌ರನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಮನೋಜ್ ಜೈನ್‌ರನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಡಿ.ರಣದೀಪ್‌ರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿಯ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ)ಯ ವ್ಯವಸ್ಥಾಪಕ ನಿರ್ದೇಶಕಿ ಖಷ್ಬೂ ಗೋಯಲ್ ಚೌಧರಿಯನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ರಮಣ್‌ದೀಪ್ ಚೌಧರಿಯನ್ನು ಕಲಬುರ್ಗಿ ಜಿಲ್ಲೆಯ ಸಾರ್ವಜನಿಕ ನಿರ್ದೇಶನಾಲಯದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನರೇಗಾ ಯೋಜನೆಯ ಮುಖ್ಯ ನಿರ್ವಹಣಾ ಅಧಿಕಾರಿ ಎಚ್.ಆರ್. ಮಹದೇವ್ ರನ್ನು ಬೆಂಗಳೂರು ದಕ್ಷಿಣ ವಲಯದ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್. ಝಿಯಾವುಲ್ಲಾರನ್ನು ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಬೆಂಗಳೂರು ದಕ್ಷಿಣ ವಲಯದ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಕೆ.ಬಿ. ಶಿವಕುಮಾರ್‌ರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಎಂ.ಜಿ.ಹಿರೇಮಠ್‌ರನ್ನು ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಂಪೆನಿಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News