ರೈತರ ಮೇಲಿನ ಮೊಕದ್ದಮೆ ಹಿಂಪಡೆಯಲು ಮನವಿ
ಚಿಕ್ಕಮಗಳೂರು, ಆ.10: ಮಹಾದಾಯಿ ನೀರಿನ ಹೋರಾಟದಲ್ಲಿ ಭಾಗವಹಿಸಿದ್ದ ರೈತರ ಮೇಲೆ ಹೂಡಿರುವ ಮೊಕದ್ದಮೆಯನ್ನು ಸರಕಾರ ತಕ್ಷಣ ಹಿಂಪಡೆಯದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಅವರು ಇಂದು ಜಿಲ್ಲಾಧ್ಯಕ್ಷ ದೇವಾನಂದ್ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಜಿ.ಸತ್ಯವತಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ, ಉತ್ತರ ಕರ್ನಾಟಕದ ಜೀವನಾಡಿ ನದಿಯಾಗಿರುವ ಮಲಪ್ರಭ ನದಿಗೆ ಮಹಾದಾಯಿ ನದಿಯಿಂದ 7.6 ಟಿಎಂಸಿ ನೀರನ್ನು ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಆ ಭಾಗದ ರೈತರು ಹಲವು ವರ್ಷಗಳಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಹೋರಾಟ ನಡೆಸುತ್ತಿದ್ದ ಮಹಿಳೆಯರು, ಮಕ್ಕಳು, ವಿದ್ಯಾರ್ಥಿ, ಅಮಾಯಕ ರೈತರು, ವೃದ್ಧರೆನ್ನದೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದಲ್ಲದೆ, ಮನೆಯೊಳಗೆ ಕೆಲಸ ಮಾಡುತ್ತಿದ್ದ ಮಹಿಳೆಯರನ್ನು ಥಳಿಸಿರುವುದು ಮಾತ್ರ ತೀವ್ರ ಖಂಡನಾರ್ಹವಾದುದು ಎಂದು ತಿಳಿಸಿದರು.
ಈ ಬಗ್ಗೆ ಸರಕಾರ ತಕ್ಷಣ ತನಿಖೆ ನಡೆಸಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಶಿಕ್ಷಗೊಳಪಡಿಸಬೇಕು ಮತ್ತು ಅಮಾಯಕ ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆದು ಬೇಡಿಕೆ ಈಡೇರಿಸುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಸರಕಾರ ಎಲ್ಲವನ್ನು ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ರೈತರ ಮೇಲಿನ ಮೊಕದ್ದಮೆ ಹಿಂಪಡೆಯದಿದ್ದಲ್ಲಿ ಜಿಲ್ಲೆಯಾದ್ಯಂತ ಬಿಜೆಪಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ದಿನೇಶ್‌ಹೊಸೂರು, ನಾಗೇಶ್, ಅವಿನಾಶ್ ಸತೀಶ್, ಸುರೇಶ್ ಇತರರು ಉಪಸ್ಥಿತರಿದ್ದರು.