×
Ad

ವಿದ್ಯಾರ್ಥಿಗಳ ಸಾಂಸ್ಕೃತಿಕ ಅನನ್ಯತೆಗೆ ಪ್ರತಿಭಾ ಕಾರಂಜಿ ವೇದಿಕೆ: ಪ್ರೊ.ಇಸ್ಮಾಯೀಲ್

Update: 2016-08-12 16:47 IST

ಕೊಣಾಜೆ, ಆ.12: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರುವಲ್ಲಿ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಅನನ್ಯತೆ, ಗುರುತಿಸುವಿಕೆಗೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಇಂತಹ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಇಸ್ಮಾಯೀಲ್ ಅಭಿಪ್ರಾಯಪಟ್ಟರು.

ಕೊಣಾಜೆಯ ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ವಿಶ್ವಮಂಗಳ ವಿದ್ಯಾಸಂಸ್ಥೆ ಮಂಗಳಗಂಗೋತ್ರಿ ಕೊಣಾಜೆ ಇದರ ಆಶ್ರಯದಲ್ಲಿ ಉಳ್ಳಾಲ ಬಿ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿಯೂ ಪ್ರಮುಖವಾದುದು. ಕೇವಲ ಪಠ್ಯ ಚಟುವಟಿಕೆಯಿಂದ ಮಾತ್ರ ವಿದ್ಯಾರ್ಥಿಗಳು ಪರಿಪೂರ್ಣತೆಯನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಪ್ರತಿಭಾ ಕಾರಂಜಿಯಂತಹ ಪಠ್ಯೇತರ ಕಾರ್ಯಕ್ರಮಗಳು ನಮ್ಮಲ್ಲಿರುವ ಪ್ರತಿಭೆಗಳನ್ನು ಶೋಧಿಸುವ ಕೆಲಸ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಅಲ್ಲದೆ ವಿಶ್ವಮಂಗಳ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಭೋಜ ಪೂಜಾರಿ, ವಿಶ್ವಮಂಗಳ ವಿದ್ಯಾಸಂಸ್ಥೆಯ ಆಡಳಿತ ವಿಬಾಗದ ಖಚಾಂಚಿ ತಿಮ್ಮಪ್ಪನಾಯಕ್, ಶಿಕ್ಷಣ ಸಂಯೋಜಕಿ ಹಿಲ್ಡಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶರಿನಾ, ಹರೇಕಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ರೈ ಹರೇಕಳ, ತಾಲೂಕು ಪಂಚಾಯತ್ ಸದಸ್ಯೆ ಪದ್ಮಾವತಿ, ಕೊಣಾಜೆ ಪಂಚಾಯತ್ ಸದಸ್ಯರಾದ ಚಂದ್ರಹಾಸ, ವೇದಾವತಿ ಗಟ್ಟಿ, ದ.ಕ.ಶಿಕ್ಷಕರ ಸಂಘದ ಕಾರ್ಯದರ್ಶಿ ರಾಧಾಕೃಷ್ಣ, ಸಿಆರ್‌ಪಿ ಸುಗುಣ, ಪೂರ್ಣಿಮಾ, ಉಳ್ಳಾಲ ಬಿ.ಹೋಬಳಿ ಮಟ್ಟದ ಸಂಪನ್ಮೂಲ ವ್ಯಕ್ತಿ ಮೀರಾ ಮುಂತಾದವರು ಉಪಸ್ಥಿತರಿದ್ದರು.

ವಿಶ್ವ ಮಂಗಳ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಉಷಾ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶೋಭಾವತಿ ವಂದಿಸಿದರು. ಸಹಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News