×
Ad

ಮಂಗಳೂರು: ಬಿಸಿಎಫ್ ವೃತ್ತಿ ಮಾರ್ಗದರ್ಶನ ಶಿಬಿರ ಆರಂಭ

Update: 2016-08-14 11:15 IST

ಮಂಗಳೂರು, ಆ.14: ದುಬೈಯ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿಕಲಚೇತನರಿಗೆ ಗಾಲಿ ಕುರ್ಚಿ ಮತ್ತು ಬಡ ಮಹಿಳೆಯರಿಗೆ ಸ್ವಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮ ಇಂದು ಅಪರಾಹ್ನ ನಡೆಯಲಿದ್ದು, ಇದರ ಅಂಗವಾಗಿ ಆಯೋಜಿಸಲಾಗಿದ್ದ ವೃತ್ತಿ ಮಾರ್ಗದರ್ಶನ ಶಿಬಿರ ಬೆಳಗ್ಗೆ ಆರಂಭಗೊಂಡಿದೆ.

 ನಗರದ ಸಂತ ಅಲೋಶಿಯಸ್ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಅಲ್ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ದುಆಗೈದರು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ, ಮನಸ್ಸು ಮತ್ತು ಪ್ರಯತ್ನ ಇದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಕನಸು ಸಾಕಾರಗೊಳಿಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
 ಬಿಸಿಎಫ್‌ನಿಂದ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಎಂದ ಶಾಸಕ ಲೋಬೊ, ಬಿಸಿಎಫ್‌ನ ಸಮಾಜ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುಎಇ ಲಂಡನ್ ಅಮೆರಿಕ್ ಸಿಟಿ ಕಾಲೇಜಿನ ನಿರ್ದೇಶಕ ಡಾ.ಪ್ರೊ. ಕಾಪು ಮುಹಮ್ಮದ್ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ನೆಲೆಯಲ್ಲಿ ಬಿಸಿಎಫ್ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮ ದಲ್ಲಿ ಪಿಯುಸಿ ಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಾದ  ಅಫ್ರಿದ, ಖತೀಜಾ ಸಲ್ವ, ಮುಹಮ್ಮದ್ ತಾಬಿಸ್ ಹಸನ್, ಎಂ‌.ಆಯಿಷಾ, ರುಕ್ಸಾನ ಫಾತಿಮಾ ಯು.ಕೆ., ಆಮೀನ ರಿಲ್ವಾನ್ ಅವರನ್ನು ಅಭಿನಂದಿಸಲಾಯಿತು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಅಬ್ಬಾಸ್ ಹಾಜಿ ಸಜಿಪ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಎಜ್ಯುಕೇಶನಲ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್‌ನ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು, ಬ್ಯಾರಿ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಅಝೀಝ್ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎಂ.ಅಸ್ಲಮ್, ಬಿಸಿಎಫ್ ಉಪಾಧ್ಯಕ್ಷ ಹಾಗೂ ವಿದ್ಯಾರ್ಥಿ ವೇತನ ಸಮಿತಿಯ ಅಧ್ಯಕ್ಷ ಎಂ.ಇ,ಮೂಳೂರು, ಬಿಸಿಎಫ್ ಉಪಾಧ್ಯಕ್ಷ ಅಬ್ದುಲ್ಲತೀಫ್ ಮುಲ್ಕಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಬಿಸಿಎಫ್ ಪೋಷಕರಾದ ಬಿ.ಎಂ.ಮುಮ್ತಾಝ್ ಅಲಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News