ದೇಶಾಭಿಮಾನ ಬೆಳೆಸುವ ಶಿಕ್ಷಣ ಇಂದಿನ ಅಗತ್ಯ: ನಾರಾಯಣ ಭಂಡಾರಿ
ವಿಟ್ಲ, ಆ.15: ದೇಶಾಭಿಮಾನವನ್ನು ಉಳಿಸಿ-ಬೆಳೆಸುವ ಶೈಕ್ಷಣಿಕ ವ್ಯವಸ್ಥೆಯ ಕೊರತೆ ನಮಲ್ಲಿರುವುದು ಅತ್ಯಂತ ವಿಷಾದನೀಯ ಎಂದು ಬಂಟ್ವಾಳ ಎಸ್‌ವಿಎಸ್ ಕಾಲೇಜು ಉಪನ್ಯಾಸಕ ನಾರಾಯಣ ಭಂಡಾರಿ ತೀವ್ರ ಖೇದ ವ್ಯಕ್ತಪಡಿಸಿದರು. ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ದೇಶದ 70ನೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಇಂದಿನ ಶೈಕ್ಷಣಿಕ ಸಂಸ್ಥೆಗಳ ಯಾವುದೇ ಪಠ್ಯ ಪುಸ್ತಕಗಳಲ್ಲಿ ಕೂಡಾ ದೇಶಾಭಿಮಾನಕ್ಕೆ ಸಂಬಂಧಪಟ್ಟ ವಿಷಯಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದರು. ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ಪೊಲೀಸ್, ಗೃಹರಕ್ಷಕ ದಳ, ವಿವಿಧ ಶಾಲಾ ಎನ್‌ಸಿಸಿ, ಎನ್ನೆಸ್ಸೆಸ್, ಬ್ಯಾಂಡ್ ವಾದ್ಯ ಮೊದಲಾದ ತುಕಡಿಗಳಿಂದ ಪಥ ಸಂಚಲನ ನಡೆಯಿತು.