×
Ad

ತೆಂಗು-ಅಡಿಕೆ ಬೆಳೆಗಳಿಗೆ ಬೆಂಬಲ ಬೆಲೆ ಆ.17ರಂದು ಕೇಂದ್ರ ಸಚಿವರೊಂದಿಗೆ ಮಾತುಕತೆ: ಸಿದ್ದರಾಮಯ್ಯ

Update: 2016-08-16 20:18 IST

ಬೆಂಗಳೂರು, ಆ. 16: ತೆಂಗು-ಅಡಿಕೆ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಸಂಬಂಧ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಬುಧವಾರ(ಆ.17) ಕೃಷಿ ಮತ್ತು ವಾಣಿಜ್ಯ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದು, ಶೀಘ್ರದಲ್ಲಿಯೆ ಪ್ರಧಾನಿಯನ್ನು ಭೇಟಿ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಮುಖಂಡರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅಡಿಕೆ ಹಾಗೂ ತೆಂಗು ಬೆಳೆಗಾರರಿಗೆ ನೆರವು ಒದಗಿಸುವ ವಿಚಾರದಲ್ಲಿ ರಾಜ್ಯ ಸರಕಾರದೊಂದಿಗೆ ಕೇಂದ್ರ ಸರಕಾರವು ಕೈ ಜೋಡಿಸಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮನವೊಲಿಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಅಡಿಕೆ, ತೆಂಗು ಬೆಳೆಗಾರರು ಸಂಕಷ್ಟ ಎದುರಿಸುತ್ತಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಟ್ಟಾಗಿ ಬೆಳೆಗಾರರ ಹಿತ ಕಾಪಾಡಲು ನಿರ್ಧರಿಸಲಾಗಿದೆ. ಅಲ್ಲದೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಈಗಾಗಲೇ ರಾಜ್ಯ ಸರಕಾರ ಹಲವು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದೆ ಎಂದರು.
    ಕೇಂದ್ರವು ಕೊಬ್ಬರಿಗೆ ಕನಿಷ್ಠ 6,420 ರೂ. ಬೆಂಬಲ ಬೆಲೆ ಘೋಷಿಸಿದೆ. ಆದರೆ, 2012ರಲ್ಲಿಯೆ ರಾಜ್ಯ ಸರಕಾರ 10,820 ರೂ. ಬೆಂಬಲ ಬೆಲೆ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು ಎಂದ ಅವರು, ರೈತರ ಸಮಸ್ಯೆಗಳಿಗೆ ಕೇಂದ್ರ ಸರಕಾರವು ಸ್ಪಂದಿಸಲಿದೆ ಎಂದು ಬಿಜೆಪಿ ಮುಖಂಡರು ಭರವಸೆ ನೀಡಿದ್ದು, ಸದ್ಯದಲ್ಲೇ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು.
  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಮಾತನಾಡಿ, ಅಡಿಕೆ ಮತ್ತು ತೆಂಗು ಬೆಳೆಗಾರರ ಜ್ವಲಂತ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ತಾವು ಈಗಾಗಲೆ ಕೇಂದ್ರದ ಕೃಷಿ ಮತ್ತು ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ. ರಾಜ್ಯ ಸರಕಾರ ಕೂಡ ರೈತರ ನೆರವಿಗೆ ಬರುವುದಾಗಿ ಹೇಳಿದೆ. ಒಟ್ಟಾರೆ ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ ಎಂದರು.
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯ ಸರಕಾರ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲರ ಜತೆ ಸೇರಿ ಕೇಂದ್ರದ ಮೇಲೆ ಒತ್ತಡ ಹಾಕೋಣ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯ ಸರಕಾರ ಕೇಂದ್ರಕ್ಕೆ ಬರೆದಿರುವ ಪತ್ರಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.
   ಸಭೆಯಲ್ಲಿ ಸಹಕಾರ ಸಚಿವ ಎಚ್.ಎಸ್.ಮಹದೇವ್‌ಪ್ರಸಾದ್, ಕೇಂದ್ರ ಸಚಿವ ಅನಂತ್‌ಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News