ಮೂಲಸೌಲಭ್ಯಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
ಶಿವಮೊಗ್ಗ, ಆ. 16: ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ ಹೋಬಳಿ ವ್ಯಾಪ್ತಿಗೆ ಬರುವ ಶೆಟ್ಟಿಹಳ್ಳಿ ಹಾಗೂ ಚಿತ್ರಶೆಟ್ಟಿಹಳ್ಳಿ ಗ್ರಾಮಗಳಲ್ಲಿ ವಿದ್ಯುತ್, ಸಾರಿಗೆ ಹಾಗೂ ವೈದ್ಯಕೀಯ ಸೇವೆ ಕಲ್ಪಿಸಬೇಕೆಂದು ಆಗ್ರಹಿಸಿ ಭೂಮಿ ಸಂಸ್ಥೆಯ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಡಿ.ಸಿ. ಕಚೇರಿಯಲ್ಲಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು. ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರಿನ ಮುಳುಗಡೆ ಸಂತ್ರಸ್ತರು ಈ ಎರಡೂ ಗ್ರಾಮಗಳಲ್ಲಿ ಸರಿಸುಮಾರು 6 ದಶಕಗಳಿಂದ ವಾಸಿಸುತ್ತಿದ್ದಾರೆ. ಆದರೆ, ಈ ಎರಡೂ ಗ್ರಾಮಗಳಲ್ಲಿ ಕನಿಷ್ಠ ಮೂಲಸೌಕರ್ಯಗಳ ವ್ಯವಸ್ಥೆಯೂ ಇಲ್ಲವಾಗಿದೆ. ಗ್ರಾಮಸ್ಥರು ದಯನೀಯ ಸ್ಥಿತಿಯಲ್ಲಿ ಜೀವನ ಸಾಗಿಸುವಂತಾಗಿದೆ. ಇವರ ಗೋಳು ಕೇಳುವವರ್ಯಾರು ಇಲ್ಲದಂತಾಗಿದ್ದಾರೆ ಎಂದು ಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದೆ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಸೇರಿದಂತೆ ಕನಿಷ್ಠ ಮೂಲ ಸೌಕರ್ಯ ಕಲ್ಪಿಸುವಂತೆ ಹಲವು ಬಾರಿ ಜಿಲ್ಲಾಡಳಿತ ಹಾಗೂ ಜನಪ್ರತಿಧಿನಿಗಳ ಗಮನ ಸೆಳೆಯಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಾಗರಿಕರ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮಕೈಗೊಳ್ಳದೆ ದಿವ್ಯ ನಿರ್ಲಕ್ಷ್ಯವಹಿಸಲಾಗಿದೆ ಎಂದು ಆಪಾದಿಸಲಾಗಿದೆ. ತಕ್ಷಣವೇ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳಬೇಕು. ಸೌಲಭ್ಯ ವಂಚಿತವಾಗಿರುವ ಈ ಎರಡೂ ಗ್ರಾಮಗಳಿಗೆ ಕಾಲಮಿತಿಯಲ್ಲಿ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಂಸ್ಥೆ ಆಗ್ರಹಿಸಿದೆ. ವಾರಕ್ಕೆ ಒಂದು ದಿನ ಅಥವಾ ಎರಡು ದಿನ ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು. ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಬಸ್ ಓಡಿಸಬೇಕು. ಅಭಯಾರಣ್ಯದ ಸಂಪತ್ತಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಸಂಸ್ಥೆ ಒತ್ತಾಯಿಸಿದೆ. ಮನವಿ ಸಲ್ಲಿಸುವ ಸಂದಭರ್ದಲ್ಲಿ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ಪದಾಧಿಕಾರಿಗಳಾದ ಸಂತೋಷ್, ನಿತಿನ್ ತಲಾರಿ ಮತ್ತಿತರರು ಉಪಸ್ಥಿತರಿದ್ದರು.