×
Ad

ಸೌಹಾರ್ದತೆಗೆ ಕ್ರೀಡೆ ಸಹಕಾರಿ: ಪ್ರೊ.ಇಸ್ಮಾಯಿಲ್

Update: 2016-08-17 20:45 IST

ಕೊಣಾಜೆ, ಆ.17: ಕ್ರೀಡೆಯು ದೈಹಿಕವಾಗಿ ನಮಗೆ ಎಷ್ಟು ಅಗತ್ಯವೋ ಅದೇ ರೀತಿಯಲ್ಲಿ ಒಗ್ಗಟ್ಟು ಹಾಗೂ ಸೌಹಾರ್ದತೆಯನ್ನು ಬೆಳೆಸಲು ಕೂಡಾ ಸಹಕಾರಿ. ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡಾ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದು ಮಂಗಳೂರು ವಿ.ವಿ.ಸಂಖ್ಯಾಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಇಸ್ಮಾಯೀಲ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಬುಧವಾರ ಕೊಣಾಜೆಯ ವಿಶ್ವಮಂಗಳ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಹಾಗೂ ವಿಶ್ವಮಂಗಳ ವಿದ್ಯಾಸಂಸ್ಥೆ ಮಂಗಳಗಂಗೋತ್ರಿ ಇದರ ಆಶ್ರಯದಲ್ಲಿ ಉಳ್ಳಾಲ ವಲಯ ಹೋಬಳಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಬ್ಬ ವಿದ್ಯಾರ್ಥಿಯು ಪರಿಪೂರ್ಣ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಪಠ್ಯದ ಕಲಿಕೆ ಮಾತ್ರ ಸಾಲದು. ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಂಡರೆ ಮಾತ್ರ ಜೀವನದ ಶಿಸ್ತನ್ನು ಬೆಳೆಸಿಕೊಂಡು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ ಮಾತನಾಡಿ, ಇಂದು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸರಕಾರ ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕೂಟದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದರು.

ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಪಾವೂರು ಮಂಡಲ ಪಂಚಾಯತ್ ಮಾಜಿ ಸದಸ್ಯ ಸೋಮಶೇಖರ ಚೌಟ ಕಡೆಂಜ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಭೋಜ ಪೂಜಾರಿ, ಶಾಲಾಡಳಿತ ಮಂಡಳಿಯ ಖಚಾಂಚಿ ತಿಮ್ಮಪ್ಪ ನಾಯ್ಕೊ, ದೈಹಿಕ ಶಿಕ್ಷಕ ರಾಧಾಕೃಷ್ಣ ರೈ, ಪಂಚಾಯತ್ ಸದಸ್ಯೆ ವೇದಾವತಿ ಗಟ್ಟಿ, ಶಿಕ್ಷಕ-ರಕ್ಷಕ ಸಂಘದ ಶರಿನಾ, ಶಂಕರಾನಂದ ಇನ್ನವಳ್ಳಿ, ಆಂಥ್ಯೂ ಡಿಸೋಜಾ, ಪೂರ್ಣಿಮಾ ಮುಂತಾದವರು ಉಪಸ್ಥಿತರಿದ್ದರು.

ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸ್ವಾಗತಿಸಿದರು. ವನಿತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾವತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News