ಕೆಪಿಎಸ್ಸಿ ನಿಯಮಗಳ ಸಡಿಲಿಸಲು ಸರಕಾರದ ನಿರ್ಧಾರ

Update: 2016-08-22 14:21 GMT

ಬೆಂಗಳೂರು, ಆ. 22: ಕೆಪಿಎಸ್ಸಿ ಮೂಲಕ ಸರಕಾರಿ ಮತ್ತು ನಿಗಮ ಮಂಡಳಿಗಳ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಇರುವ ಶೇ.60ರಷ್ಟು ಅಂಕ ಕಡ್ಡಾಯ ನಿಯಮವನ್ನು ಸಡಿಲಿಸುವುದು ಸೇರಿದಂತೆ ಕೆಪಿಎಸ್ಸಿ ನಿಯಮಗಳಿಗೆ ತಿದ್ದುಪಡಿ ತರಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ನಡೆದ ಸಭೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನಿಮಯಗಳಿಗೆ ತಿದ್ದುಪಡಿ ತರುವ ವಿಚಾರದಲ್ಲಿ ಎರಡು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಸಂದರ್ಭದಲ್ಲಿ ಮುಖ್ಯಪರೀಕ್ಷೆಯಿಂದ ಸಂದರ್ಶನಕ್ಕೆ ಹಾಜರಾಗುವ ವೇಳೆ ಅನುಸರಿಸುತ್ತಿದ್ದ 1:3 ಅನುಪಾತವನ್ನು 1:5ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕೆಪಿಎಸ್ಸಿ ನಿಯಮಗಳಿಗೆ ತಿದ್ದುಪಡಿ ತರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಅನುಪಾತ ನಿಯಮ ಬದಲಾವಣೆಯಿಂದಾಗಿ ವಿದ್ಯಾರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅನುಕೂಲವಾಗುತ್ತದೆ. ಜೊತೆಗೆ ಎಲ್ಲ ವರ್ಗಗಳು ಅದರಲ್ಲೂ ವಿಶೇಷವಾಗಿ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎಂದು ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.
ನಿಯಮ ತಿದ್ದುಪಡಿಯಾದರೆ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಎಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗುತ್ತಾರೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅವಕಾಶವೂ ಇದರಿಂದ ಅವರಿಗೆ ಸಿಗಲಿದೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News