ಬಂಟ್ವಾಳ : ದೇವರಾಜ ಅರಸು ಜನ್ಮ ದಿನಾಚರಣೆ

Update: 2016-08-22 15:16 GMT

ವಿಟ್ಲ,ಆ.22 : ಹಿಂದುಳಿದ ವರ್ಗಗಳ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 101ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ಬಂಟ್ವಾಳ ತಾಲೂಕಾಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು ಮಾತನಾಡಿ ಕರ್ನಾಟಕ ರಾಜ್ಯಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಡಿ. ದೇವರಾಜ ಅರಸು ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗಾಗಿ ನೀಡಿದ ಕೊಡುಗೆ ಅನನ್ಯ ಎಂದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಜಿ.ಪಂ. ಸದಸ್ಯರುಗಳಾದ ಎಂ.ಎಸ್. ಮುಹಮ್ಮದ್, ರವೀಂದ್ರ ಕಂಬಳಿ, ಮಂಜುಳಾ ಮಾವೆ, ಕಮಲಾಕ್ಷಿ ಕೆ. ಪೂಜಾರಿ, ತಾ.ಪಂ. ಸದಸ್ಯರುಗಳಾದ ಸಂಜೀವ ಪೂಜಾರಿ ಬೊಳ್ಳಾಯಿ, ಗಣೇಶ್ ಸುವರ್ಣ ತುಂಬೆ, ಯಶವಂತ ಪೂಜಾರಿ, ಪದ್ಮಶ್ರೀ, ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಕಾರ್ಯಕ್ರಮದ ಪ್ರಯುಕ್ತ ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಯಣ್ಣ ಸ್ವಾಗತಿಸಿ, ಶಿವಣ್ಣ ಪ್ರಸ್ತಾವನೆಗೈದರು. ಮಂಜುವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News